HealthKannada NewsKarnataka NewsLatestPolitics

*ಯಮಕನಮರಡಿಯಲ್ಲಿ 17 ಸಾವಿರ ಮತಗಳ ಅಳಿಕೆ ಶಂಕೆ*: *ಸತೀಶ ಜಾರಕಿಹೊಳಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರವಾಗಿ ಹಿಂದಿನ ದಿನ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 17 ಸಾವಿರ ಮತಗಳು ಮತದಾರರ ಪಟ್ಟಿಯಿಂದ ಅಳಿಕೆಯಾಗಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವರು, ಬೇರೆ ರಾಜ್ಯಗಳಲ್ಲಿ ಫಾರ್ಮ್ ನಂ. 7 ಬಳಸಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆದಿರುವುದನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾಗಿ ಹೇಳಿದ್ದಾರೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುವ ಸಂದರ್ಭದಲ್ಲಿ ಈ ವಿಷಯವನ್ನು ಉಲ್ಲೇಖಿಸಲಾಗಿತ್ತು. ರಾಹುಲ್ ಗಾಂಧಿ ಅವರ ಹೋರಾಟ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ನಡೆಸುತ್ತಿದೆ ಎನ್ನಲಾದ ಮತ ಕಡಿತದ ಪ್ರಯತ್ನಗಳನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಪ್ರಕ್ರಿಯೆ ಬೆಳಗಾವಿ ಜಿಲ್ಲೆಯಿಂದಲೇ ಆರಂಭವಾಗಿದ್ದು, ಈ ಸಂಬಂಧ ಪೊಲೀಸ್ ಪ್ರಕರಣವೂ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿರುವ ವಿಚಾರ ಮಾಧ್ಯಮಗಳಲ್ಲಿಯೂ ವರದಿಯಾಗಿದೆ ಎಂದು ಹೇಳಿದ್ದಾರೆ.

ಇದರ ಮುಂದುವರಿದ ಭಾಗವಾಗಿ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 17 ಸಾವಿರ ಮತಗಳು ಮತದಾರರ ಪಟ್ಟಿಯಿಂದ ಅಳಿಕೆಯಾಗಿರುವುದು ಕಂಡುಬಂದಿದೆ ಎಂದು ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಹೊಸ ಮತದಾರರ ಪಟ್ಟಿ ಕೈ ಸೇರಿದ ಬಳಿಕ ಸಮಗ್ರ ಪರಿಶೀಲನೆ ನಡೆಸಲಾಗುವುದು. ಬೇರೆಡೆಗೆ ವಲಸೆ ಹೋದವರು, ಮೃತಪಟ್ಟವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡವರನ್ನು ಪ್ರತ್ಯೇಕವಾಗಿ ಗುರುತಿಸಲಾಗುವುದು. ನಿಜವಾಗಿಯೂ ಎಷ್ಟು ಮತಗಳು ಅಳಿಕೆಯಾಗಿವೆ ಎಂಬುದನ್ನು ಪರಿಶೀಲಿಸಿದ ನಂತರ ಮತ್ತೊಮ್ಮೆ ಸ್ಪಷ್ಟ ಮಾಹಿತಿ ನೀಡುವುದಾಗಿ ಸಚಿವರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button