*ಅನಧಿಕೃತ ಬಡಾವಣೆಗಳಿಗೆ ಅನುಮತಿ ನೀಡಿದರೆ ಪಿಡಿಓಗಳ ವಿರುದ್ಧ ಪ್ರಕರಣ*: *ಬೆಳಗಾವಿಯಲ್ಲಿ ಲೋಕಾಯುಕ್ತ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನಧಿಕೃತ ಬಡಾವಣೆಗಳಿಗೆ ಪರವಾನಿಗೆ ನೀಡಿದರೆ ಸಂಬಂಧಪಟ್ಟ ಬಡಾವಣೆ ಮಾಲೀಕರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಓ) ವಿರುದ್ಧ ಲೋಕಾಯುಕ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ ನೀಡಿದರು.
ಬೆಳಗಾವಿ ತಾಲೂಕಿನ ಮುತಗಾ ಗ್ರಾಮ ಪಂಚಾಯಿತಿಗೆ ಶನಿವಾರ ಭೇಟಿ ನೀಡಿದ ಅವರು, ಪಂಚಾಯಿತಿ ಆಡಳಿತ ವ್ಯವಸ್ಥೆ, ಅಧಿಕಾರಿಗಳ ಹಾಜರಾತಿ ನಿರ್ವಹಣೆ ಹಾಗೂ ವಿವಿಧ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು.
ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಾತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವುದು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಅಲ್ಲದೆ, ಗುತ್ತಿಗೆದಾರರು ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಹೊಂದಿರಬೇಕು ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದಂತೆ ರಸೀದಿಗಳನ್ನು ನೀಡಬೇಕು. ಅಕ್ರಮ ಹಣಕಾಸು ವಹಿವಾಟು ಕಂಡುಬಂದಲ್ಲಿ ಲೋಕಾಯುಕ್ತ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅಂಗನವಾಡಿ ಕೇಂದ್ರಕ್ಕೂ ಭೇಟಿ
ಇದಕ್ಕೂ ಮೊದಲು ಮುತಗಾ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಉಪ ಲೋಕಾಯುಕ್ತರು, ಅಂಗನವಾಡಿ ಶಿಕ್ಷಕರಿಂದ ಮಕ್ಕಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.
ಅಂಗನವಾಡಿಗಳಲ್ಲಿ ಅಡುಗೆ ಅನಿಲ ಬಳಕೆ ವೇಳೆ ಎಚ್ಚರಿಕೆ ವಹಿಸಬೇಕು. ಮಕ್ಕಳನ್ನು ಅಪಾಯಕಾರಿ ವಸ್ತುಗಳಿಂದ ದೂರವಿಡಬೇಕು. ಗರ್ಭಿಣಿಯರಿಗೆ ಮೊಟ್ಟೆ ಸೇರಿದಂತೆ ಪೌಷ್ಟಿಕ ಆಹಾರ ಹಾಗೂ ಮಕ್ಕಳಿಗೆ ಗುಣಮಟ್ಟದ ಆಹಾರ ಮತ್ತು ಅಗತ್ಯ ಕಲಿಕಾ ಸಾಮಗ್ರಿಗಳನ್ನು ಸಮರ್ಪಕವಾಗಿ ಒದಗಿಸಬೇಕು ಎಂದು ಸೂಚಿಸಿದರು.
ಮಕ್ಕಳ ಊಟ, ಗರ್ಭಿಣಿಯರ ಪೌಷ್ಟಿಕ ಆಹಾರ ಹಾಗೂ ಇತರ ಮೂಲಸೌಲಭ್ಯಗಳ ವಿತರಣೆಯಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿ. ವೀರಪ್ಪ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಉಪ ನಿಬಂಧಕ ಅರವಿಂದ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ್, ಬೆಳಗಾವಿ ಲೋಕಾಯುಕ್ತ ಅಧೀಕ್ಷಕ ಪ್ರಸನ್ನ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




