*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *ಇಂದಿನಿಂದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ನವೆಂಬರ್ 2ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಆಂಧ್ರಪ್ರದೇಶದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹವಾಮಾನದಲ್ಲೂ ಬದಲಾವಣೆಯಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿರುವ ಚಂಡಮಾರುತವು ನವೆಂಬರ್ 3ರ ಬೆಳಗ್ಗೆ ನೆಲ್ಲೂರು ಮತ್ತು ನರಸಾಪುರ ನಡುವಿನ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗವನ್ನು ದಾಟುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೊಮ್ಮೆ ಗಾಳಿಯ ವೇಗ 120 ಕಿ.ಮೀ ತಲುಪಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರ್ನಾಟಕದ ಯಾವ ಭಾಗದಲ್ಲಿ ಮಳೆ
ಕರಾವಳಿ ಕರ್ನಾಟಕದಲ್ಲಿ ಈಗಾಗಲೇ ಮಳೆ ಆರಂಭವಾಗಿದ್ದು, ಮುಂದಿನ ಕೆಲವು ದಿನಗಳವರೆಗೆ ಮಳೆಯ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್ 2 ಮತ್ತು 3ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.



