
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ನಾಲ್ಕನೇ ದಿನ. ದೇವಿಯ ದರ್ಶನ ಪಡೆಯಲು ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಧರ್ಮದರ್ಶನ ಸೇರಿದಂತೆ 1,000 ಮತ್ತು 300 ರೂಪಾಯಿಗಳ ವಿಶೇಷ ದರ್ಶನದ ಸಾಲುಗಳಲ್ಲೂ ಭಕ್ತರು ತುಂಬಿ ತುಳುಕುತ್ತಿದ್ದಾರೆ. ಭಕ್ತರ ಸಂಖ್ಯೆ ಹೆಚ್ಚಾಗಿರುವುದರಿಂದ ದರ್ಶನಕ್ಕೆ ಕೊಂಚ ವಿಳಂಬವಾಗುತ್ತಿದ್ದರೂ ಭಕ್ತರು ತಾಳ್ಮೆಯಿಂದ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಆನ್ಲೈನ್ ಟಿಕೆಟ್ ಬುಕ್ಕಿಂಗ್, ನೇರ ವಿಶೇಷ ದರ್ಶನದ ಟಿಕೆಟ್ ಮಾರಾಟ ಹಾಗೂ ಲಾಡು ಪ್ರಸಾದ ಮಾರಾಟದಿಂದ ದೇವಸ್ಥಾನಕ್ಕೆ ಮೂರೇ ದಿನಗಳಲ್ಲಿ ಐದು ಕೋಟಿ ರೂಪಾಯಿಗೂ ಅಧಿಕ ಆದಾಯ ಸಂಗ್ರಹವಾಗಿದೆ. 1,000 ಮತ್ತು 300 ರೂಪಾಯಿಗಳ ವಿಶೇಷ ದರ್ಶನದ ಟಿಕೆಟ್ಗಳಿಗೂ ಭಾರೀ ಬೇಡಿಕೆ ವ್ಯಕ್ತವಾಗಿದೆ.
ಇಂದು ಹಾಸನಾಂಬೆ ದೇವಿಯ ದರ್ಶನಕ್ಕೆ ಹಲವು ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಹಾಗೂ ನ್ಯಾಯಾಧೀಶರು ದೇವಿಯ ದರ್ಶನ ಪಡೆಯಲಿದ್ದಾರೆ. ಗಣ್ಯರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.



