*ಕಬ್ಬಿನ ಬೆಲೆ ಘೋಷಣೆಗೆ ಆಗ್ರಹಿಸಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮುಂದೆ ರೈತರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸಚಿವರ ನಿವಾಸದ ಮುಂದೆ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಕೂಡಲೇ ಕಬ್ಬಿನ ಬೆಲೆ ಘೋಷಣೆ ಮಾಡುವಂತೆ ಒತ್ತಾಯಿಸಿದರು. ಸಚಿವರ ಮನೆ ಮುಂದೆ ಕುಳಿತು ಧರಣಿ ನಡೆಸಿದರು
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಗಣೇಶ್ ಇಳಿಗೇರ, ಕಳೆದ ಏಳು ತಿಂಗಳಿನಿಂದ ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸದೆ ಜವಾಬ್ದಾರಿ ಪ್ರದರ್ಶಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೆಹಲಿಗೆ ತೆರಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡ ರೈತರಿಗೆ ಚಾಕೊಲೇಟ್ ನೀಡಿ ಕಳುಹಿಸಿರುವುದು ರೈತರ ಹೋರಾಟವನ್ನು ಸರ್ಕಾರಗಳು ಎಷ್ಟು ಲಘುವಾಗಿ ಪರಿಗಣಿಸಿವೆ ಎಂಬುದಕ್ಕೆ ಸಾಕ್ಷಿಯಾಗಿದೆ. ಕಬ್ಬಿಗೆ ಸೂಕ್ತ ಬೆಲೆ ಸಿಗದೆ ರೈತರು ಸಂಕಷ್ಟದಲ್ಲಿದ್ದು, ಬೆಳೆಗಳಿಗೆ ಬೆಂಕಿ ಅವಘಡ ಹಾಗೂ ಶಾರ್ಟ್ ಸರ್ಕ್ಯೂಟ್ನಿಂದ ಅಪಾರ ನಷ್ಟವಾಗುತ್ತಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯನ್ನು ಸಂಪೂರ್ಣವಾಗಿ ಬಂದ್ ಮಾಡಿ ರೈತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ರ್ಯಾಲಿ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇಂದು ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಚರ್ಚಿಸಿ, ಮುಖ್ಯಮಂತ್ರಿಗಳೊಂದಿಗೆ ತಕ್ಷಣ ಸಭೆ ನಡೆಸಿ ಕಬ್ಬಿನ ಬೆಲೆ ಘೋಷಿಸುವಂತೆ ಒತ್ತಾಯಿಸಲಾಗುವುದು ಎಂದರು.
ಈ ಹಿಂದೆ ಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದರೂ ಕೇಂದ್ರ ಸರ್ಕಾರದ ಮೇಲೆ ಜವಾಬ್ದಾರಿ ಹಾಕಿ ಸಮಸ್ಯೆಯನ್ನು ಮುಂದೂಡಲಾಗಿದೆ. ರಾಜ್ಯ ಸರ್ಕಾರ ಕೇಂದ್ರದ ಮೇಲೂ, ಕೇಂದ್ರ ಸರ್ಕಾರ ರಾಜ್ಯದ ಮೇಲೂ ಜವಾಬ್ದಾರಿ ವರ್ಗಾಯಿಸುವುದನ್ನು ನಿಲ್ಲಿಸಿ ರೈತರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಬೇಕು. ಕಬ್ಬಿನ ಬೆಲೆ ಘೋಷಿಸಿ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು. ಇಲ್ಲದಿದ್ದರೆ ‘ಮಾಡು ಇಲ್ಲವೇ ಮಡಿ’ ಹೋರಾಟದ ಮೂಲಕ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗೌರವಾಧ್ಯಕ್ಷ ರಾಘವೇಂದ್ರ ನಾಯಕ ಮಾತನಾಡಿ, ಬರಗಾಲ ಮತ್ತು ನೀರಿನ ಕೊರತೆಯ ನಡುವೆಯೂ ಸಮರ್ಪಕ ವಿದ್ಯುತ್ ಪೂರೈಕೆಯಾಗದೆ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳು ನಾಳೆಯಿಂದಲೇ ಕಾರ್ಯಾರಂಭ ಮಾಡಬೇಕು ಎಂಬುದು ರೈತರ ಪ್ರಮುಖ ಬೇಡಿಕೆಯಾಗಿದೆ ಎಂದು ತಿಳಿಸಿದರು.
ಕಳೆದ ಮೂರು-ನಾಲ್ಕು ತಿಂಗಳಿಂದ ರೈತರು ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿವೆ. ಜಿಲ್ಲಾ ಉಸ್ತುವಾರಿ ಸಚಿವರು, ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ರೈತ ಮುಖಂಡರು ಒಟ್ಟಾಗಿ ಸಭೆ ನಡೆಸಿ, ಇಂದೇ ಕಾರ್ಖಾನೆಗಳ ಆರಂಭದ ಕುರಿತು ಅಧಿಕೃತ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಉಗಾರ ಶುಗರ್ಸ್, ನಿರಾಣಿ ಶುಗರ್ಸ್, ಸೋಮಯ್ಯ ಶುಗರ್ಸ್ ಸೇರಿದಂತೆ ರಾಜ್ಯದ ಪ್ರಮುಖ ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಟ್ಟಾಗಿ ಚರ್ಚಿಸಿ ಕಬ್ಬಿನ ಬೆಲೆ ನಿಗದಿಪಡಿಸುವ ಕುರಿತು ನಿರ್ಧಾರ ಕೈಗೊಳ್ಳಬೇಕು. ಮಹಾರಾಷ್ಟ್ರದಲ್ಲಿ ಅನುಸರಿಸುವ ಮಾದರಿಯಲ್ಲಿ ರಾಜ್ಯದಲ್ಲಿಯೂ ಬೆಲೆ ನಿಗದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಮುಖ ಕಾರ್ಖಾನೆಗಳು ತೆಗೆದುಕೊಳ್ಳುವ ನಿರ್ಧಾರ ಇತರೆ ಕಾರ್ಖಾನೆಗಳಿಗೂ ಮಾದರಿಯಾಗಬೇಕು. ಪ್ರತಿವರ್ಷ ಕಬ್ಬಿನ ಬೆಲೆ ವಿಚಾರವಾಗಿ ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಸಂಘರ್ಷ ನಡೆಯುವುದನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ಸಮನ್ವಯದಿಂದ ಚರ್ಚಿಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.




