Belagavi NewsBelgaum NewsKannada NewsKarnataka News

*ಸಭೆ ಆರಂಭವಾಗದಿದ್ದಕ್ಕೆ ರೈತರ ಆಕ್ರೋಶ ಸ್ಫೋಟ*: *ಡಿಸಿ ಕಚೇರಿ ಎದುರು ರಸ್ತೆ ಬಂದ್, ಬಸ್ ತಡೆದು ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಬೇಕಿದ್ದ ಸಭೆ ಆರಂಭವಾಗದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಸ್ಫೋಟಗೊಂಡಿದೆ. ಮಧ್ಯಾಹ್ನದಿಂದಲೇ ಸಭೆಗಾಗಿ ಕಾದು ಕುಳಿತಿದ್ದ ರೈತರು, ಏಕಾಏಕಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ರೈತರು ಧರಣಿ ನಡೆಸಿ, ಸಂಚಾರಕ್ಕೆ ಅಡ್ಡಿಪಡಿಸಿದರು. ಅಲ್ಲದೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌ಗಳನ್ನು ತಡೆದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಭೆ ಆರಂಭಿಸಲು ವಿಳಂಬ ಮಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ರೈತರು, ಅಧಿಕಾರಿಗಳ ವಿರುದ್ಧವೂ ಕಿಡಿಕಾರಿದರು. ರೈತರ ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

ಇನ್ನೊಂದೆಡೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಬೇಕಿದ್ದರೂ, ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಗೌಪ್ಯ ಸ್ಥಳದಲ್ಲಿ ಸಭೆ ನಡೆಯುತ್ತಿರುವ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ರೈತ ಮುಖಂಡರಾದ ಚೂನಪ್ಪ ಪೂಜಾರಿ, ಶಶಿಕಾಂತ ಗುರುಜಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಭಾಗಿಯಾಗಿದ್ದಾರೆ.

ಒಂದೆಡೆ ರೈತರು ರಸ್ತೆಗಿಳಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದರೆ, ಮತ್ತೊಂದೆಡೆ ಗೌಪ್ಯ ಸ್ಥಳದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಬ್ಬಿನ ಬೆಲೆ ವಿಚಾರವಾಗಿ ಯಾವ ನಿರ್ಧಾರ ಹೊರಬೀಳಲಿದೆ ಎಂಬ ಕುತೂಹಲ ಮೂಡಿದೆ.

Related Articles

Back to top button