Belagavi NewsBelgaum NewsElection NewsKannada NewsKarnataka NewsNational

*ನಾಳೆಯೊಳಗೆ ಕಬ್ಬಿನ ದರ ವಿವಾದಕ್ಕೆ ತೆರೆ ಎಳೆಯುವ ಭರವಸೆ: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ಮುಂದುವರಿದಿರುವ ಬಿಕ್ಕಟ್ಟಿಗೆ ನಾಳೆಯೊಳಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.

ಬೆಳಗಾವಿಯಲ್ಲಿ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಮನವಿಯ ಮೇರೆಗೆ ಮತ್ತೊಮ್ಮೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದ್ದರೂ, ದರ ನಿಗದಿ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಮತ್ತೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ರೈತರು ಮುಂದಿಟ್ಟಿರುವ ಬೇಡಿಕೆಗಳು ಹಾಗೂ ಕಾರ್ಖಾನೆ ಮಾಲೀಕರ ನಿಲುವಿನಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ದರ ನಿಗದಿ ಪ್ರಕ್ರಿಯೆ ವಿಳಂಬವಾಗುತ್ತಿದೆ. ಇಂದಿನ ಸಭೆಯಲ್ಲಿ ಶೇ.50ರಷ್ಟು ಪ್ರಗತಿ ಸಾಧಿಸಲಾಗಿದ್ದು, ಉಭಯ ಬಣಗಳ ನಡುವಿನ ದರದ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದರು.

ಅಗತ್ಯವಿದ್ದರೆ ನಾಳೆಯೂ ಕಾರ್ಖಾನೆ ಮಾಲೀಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಕೇವಲ ಕಬ್ಬಿನ ದರ ನಿಗದಿ ವಿಚಾರವಾಗಿಯೇ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಹೇಳಿದರು.

ಎಸ್‌ಎಪಿ ಮತ್ತು ಎಂಎಸ್‌ಪಿ ವಿಚಾರದಲ್ಲಿ ಸರ್ಕಾರ ರೈತರ ಪರವಾಗಿ ನಿಲ್ಲಲಿದೆ. ಸಕ್ಕರೆ ಬೆಲೆಯಲ್ಲಿ ನಿರಂತರ ಏರಿಳಿತವಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ಕರೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ. ಸಕ್ಕರೆಗೆ ಎಂಎಸ್‌ಪಿ ನಿಗದಿಯಾದರೆ ಕಾರ್ಖಾನೆ ಮಾಲೀಕರಿಗೂ ಆರ್ಥಿಕವಾಗಿ ಅನುಕೂಲವಾಗಲಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಒಮ್ಮತ ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಉಭಯ ಬಣಗಳ ನಡುವೆ ಹೊಂದಾಣಿಕೆ ಸಾಧಿಸಿದ ಬಳಿಕ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುವುದು. ರೈತರು ಒಪ್ಪಿಗೆ ಸೂಚಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ. ಇಲ್ಲದಿದ್ದರೆ ಮತ್ತೆ ಬಿಕ್ಕಟ್ಟು ಎದುರಾಗುವ ಸಾಧ್ಯತೆಯಿದೆ. ಆದ್ದರಿಂದ ನಾಳೆಯೊಳಗೆ ಕಬ್ಬಿನ ದರ ವಿವಾದ ಇತ್ಯರ್ಥಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

Related Articles

Back to top button