Belagavi NewsBelgaum NewsKannada NewsKarnataka NewsLatest

*ಕಬ್ಬಿನ ಬೆಲೆ ಕಗ್ಗಂಟು*: *ಸತೀಶ್ ಜಾರಕಿಹೊಳಿ ಜೊತೆಗಿನ ಸಭೆ ವಿಫಲ, ಇಂದು ಡಿಕೆಶಿ ಜೊತೆ ಮತ್ತೊಂದು ಸುತ್ತಿನ ಮಾತುಕತೆ*

ಪ್ರಗತಿವಾಹಿನಿ ಸುದ್ದಿ: ಕಬ್ಬಿಗೆ ಸೂಕ್ತ ಬೆಲೆ ಸಿಗದೆ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಪಾದಯಾತ್ರೆ, ಹೆದ್ದಾರಿ ಬಂದ್, ಕರ್ನಾಟಕ ಬಂದ್ ಹಾಗೂ ಜೈಲ್ ಭರೋ ಚಳವಳಿ ನಡೆಸಿದರೂ ರೈತರ ಬೇಡಿಕೆ ಈಡೇರಿಲ್ಲ. ಟನ್ ಕಬ್ಬಿಗೆ 5,500 ರೂಪಾಯಿ ನಿಗದಿಪಡಿಸಬೇಕು ಎಂಬುದು ರೈತರ ಪ್ರಮುಖ ಆಗ್ರಹ. ಸಚಿವರ ನೇತೃತ್ವದಲ್ಲಿ ನಡೆದ ಸಭೆಗಳೂ ಫಲ ನೀಡದಿರುವುದು ಹೋರಾಟಗಾರರ ಆಕ್ರೋಶ ಹೆಚ್ಚಿಸಿದೆ.

ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿತ್ತು. ಆದರೆ ಸಂಜೆ 5 ಗಂಟೆಯಾದರೂ ಸಭೆ ಆರಂಭವಾಗಿರಲಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಯೊಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ತೀವ್ರ ವಾಗ್ವಾದ ನಡೆಯಿತು. ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದ ರೈತರು, ಮುಕ್ತ ಸಭೆ ನಡೆಸುವಂತೆ ಒತ್ತಾಯಿಸಿದರು. ಈ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬಳಿಕ ಸಂಜೆ 6.30ರ ಸುಮಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಆರಂಭವಾಯಿತು. ಕಬ್ಬು ಒಣಗುತ್ತಿದೆ, ಬೆಂಕಿಗೆ ಆಹುತಿಯಾಗುತ್ತಿದೆ. ಹೀಗಾಗಿ ತಕ್ಷಣವೇ ದರ ನಿಗದಿಪಡಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ಆದರೆ ಈ ಸಭೆಯಲ್ಲೂ ಯಾವುದೇ ಅಂತಿಮ ನಿರ್ಧಾರ ಹೊರಬರಲಿಲ್ಲ.

ಇದಾದ ಬಳಿಕ ಆಯ್ದ ರೈತ ಮುಖಂಡರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಚಿವ ಸತೀಶ್ ಜಾರಕಿಹೊಳಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು. ಈ ಸಭೆಯೂ ವಿಫಲವಾಯಿತು. ಸಭೆಗೆ ಗೈರಾಗಿದ್ದ ರೈತ ಮುಖಂಡ ಚೂನಪ್ಪ ಪೂಜಾರಿ, ರಾಜ್ಯ ಸರ್ಕಾರ ಟನ್ ಕಬ್ಬಿಗೆ 1,000 ರೂಪಾಯಿ ಪ್ರೋತ್ಸಾಹಧನ ನೀಡುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನು ಹಾವೇರಿಯಲ್ಲೂ ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಭೆ ವಿಫಲವಾಗಿದೆ. ಮೈಸೂರು ಮತ್ತು ಮಂಡ್ಯದಲ್ಲೂ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗ ಎಲ್ಲರ ಗಮನ ಮುಖ್ಯಮಂತ್ರಿ ಜೊತೆ ನಡೆಯಲಿರುವ ಸಭೆಯತ್ತ ನೆಟ್ಟಿದೆ. ಇಂದು ಕಬ್ಬು ಬೆಳೆಗಾರರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದ್ದು, ಕಬ್ಬಿನ ದರ ನಿಗದಿ ಕುರಿತು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ರೈತರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತದೆಯೇ ಅಥವಾ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

Related Articles

Back to top button