*ಚೂನಪ್ಪ ಪೂಜಾರಿ ಸೇರಿ ನೂರಾರು ರೈತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ಹಿಂಡಲಗಾ ಜೈಲ್ ಭರೋ ಚಳವಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.
ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಮುಕ್ತಿಮಠದ ಬಳಿ ರೈತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಮುಕ್ತಿಮಠದಿಂದ ಹಿಂಡಲಗಾ ಜೈಲಿನವರೆಗೆ ಪಾದಯಾತ್ರೆ ನಡೆಸಲು ರೈತರು ಸಜ್ಜಾಗಿದ್ದರು. ಆದರೆ, ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಮುಕ್ತಿಮಠದ ಬಳಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ಪಾದಯಾತ್ರೆ ಆರಂಭಕ್ಕೂ ಮುನ್ನವೇ ಪೊಲೀಸರು ರೈತರನ್ನು ತಡೆದು ವಶಕ್ಕೆ ಪಡೆಯಲು ಮುಂದಾದರು. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಬಲವಂತವಾಗಿ ನೂರಾರು ರೈತರನ್ನು ವಶಕ್ಕೆ ಪಡೆದಿದ್ದು, ಹೋರಾಟದ ನೇತೃತ್ವ ವಹಿಸಿದ್ದ ಚೂನಪ್ಪ ಪೂಜಾರಿಯನ್ನೂ ಬಂಧಿಸಿದ್ದಾರೆ.
ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಚೂನಪ್ಪ ಪೂಜಾರಿ, ಸರ್ಕಾರ ರೈತರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿ ರೈತರಿಗೆ ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರೂಪಾಯಿ ನೀಡುವ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು.
ಪೊಲೀಸರು ನಮ್ಮನ್ನು ವಶಕ್ಕೆ ಪಡೆದ ಮಾತ್ರಕ್ಕೆ ಹೋರಾಟ ನಿಲ್ಲುವುದಿಲ್ಲ. ರೈತರು ವಿವಿಧೆಡೆ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆಯನ್ನು ಮುಂದುವರಿಸಬೇಕು ಎಂದು ಕರೆ ನೀಡಿದರು.
ಜೈಲ್ ಭರೋ ಚಳವಳಿ ಆರಂಭಕ್ಕೂ ಮುನ್ನವೇ ರೈತರನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮದಿಂದ ಮುಕ್ತಿಮಠದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಬ್ಬಿನ ಬೆಲೆ ಹೆಚ್ಚಳದ ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ.




