CrimeKannada NewsKarnataka NewsLatest

*ಒಂದೇ ಕುಟುಂಬದ ಏಳು ಮಂದಿಯ ಭೀಕರ ಹತ್ಯೆ*: *ಪತ್ನಿಯ ಕುಟುಂಬವನ್ನೇ ಮುಗಿಸಿದ ಪತಿ!*

ಪ್ರಗತಿವಾಹಿನಿ ಸುದ್ದಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಏಳು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಸೇರಿದಂತೆ ಆಕೆಯ ಕುಟುಂಬದ ಏಳು ಮಂದಿಯನ್ನು ಕ್ಯಾಬ್ ಚಾಲಕ ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಮೃತದೇಹಗಳನ್ನು ಬೇರೆ ಬೇರೆ ಸ್ಥಳಗಳಲ್ಲಿ ಎಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಇಂದುಶೇಖರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತರನ್ನು ರೂಪವತಿ, ಆಕೆಯ ಮಗಳು ಸುನೀತಾ, ಪುತ್ರರಾದ ಶಿವಕುಮಾರ್ ಮತ್ತು ಶಂಕರ್, ಸೊಸೆಯಂದಿರಾದ ದಿವ್ಯಾ ಮತ್ತು ನಳಿನಿ ಹಾಗೂ ಏಳು ವರ್ಷದ ಬಾಲಕ ಪುನೀತ್ ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಬೆಂಗಳೂರಿನ ಶ್ರೀರಾಮ್‌ ಪುರದಲ್ಲಿ ನಡೆದಿದೆ.

ಸುಮಾರು 20 ವರ್ಷಗಳ ಹಿಂದೆ ಸುನೀತಾಳನ್ನು ವಿವಾಹವಾಗಿದ್ದ ಇಂದುಶೇಖರ್, ಪತ್ನಿ ತನ್ನ ತವರು ಮನೆಯವರೊಂದಿಗೆ ಸಂಪರ್ಕದಲ್ಲಿರುವುದನ್ನು ವಿರೋಧಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಮೊದಲಿಗೆ ಪತ್ನಿ ಸುನೀತಾಳನ್ನು ತನ್ನ ಮನೆಯಲ್ಲೇ ರುಬ್ಬುಗುಂಡಿನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ಬಳಿಕ ಆಕೆಯ ಕುಟುಂಬದವರಿಗೆ ಅನುಮಾನ ಬಾರದಂತೆ ಸುನೀತಾ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಳೆ ಎಂದು ಸುಳ್ಳು ಹೇಳಿದ್ದಾನೆ. ನಂತರ ಮದ್ಯಪಾನದ ನೆಪದಲ್ಲಿ ಭಾಮೈದರಾದ ಶಿವಕುಮಾರ್ ಮತ್ತು ಶಂಕರ್ ಅವರನ್ನು ಮನೆಗೆ ಕರೆಸಿಕೊಂಡು ಹತ್ಯೆ ಮಾಡಿದ್ದಾನೆ. ಬಳಿಕ ಅವರ ಪತ್ನಿಯರಾದ ನಳಿನಿ, ದಿವ್ಯಾ, ಅತ್ತೆ ರೂಪವತಿ ಹಾಗೂ ಬಾಲಕ ಪುನೀತ್‌ನನ್ನೂ ಕೊಂದಿದ್ದಾನೆ.

ನಳಿನಿ ನಿಗೂಢವಾಗಿ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆಕೆಯ ತಾಯಿ ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಇಂದುಶೇಖರ್‌ನನ್ನು ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಹೇಳಿಕೆಗಳಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಮನೆಯ ಪರಿಶೀಲನೆ ನಡೆಸಿದಾಗ ಹತ್ಯೆಗೆ ಸಂಬಂಧಿಸಿದ ಸುಳಿವುಗಳು ಸಿಕ್ಕಿವೆ. ತೀವ್ರ ವಿಚಾರಣೆ ವೇಳೆ ಆರೋಪಿ ಕೃತ್ಯ ಒಪ್ಪಿಕೊಂಡಿದ್ದಾನೆ.

ಹತ್ಯೆಯ ಬಳಿಕ ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದ ಸುತ್ತಮುತ್ತ ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿದ್ದಾನೆ . ಗುರುವಾರ ಆರೋಪಿಯನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸತತ ನಾಲ್ಕು ಗಂಟೆಗಳ ಹುಡುಕಾಟದ ಬಳಿಕ ಏಳು ವರ್ಷದ ಬಾಲಕ ಪುನೀತ್‌ನ ಮೃತದೇಹ ಪತ್ತೆಯಾಗಿದೆ. ಉಳಿದ ಆರು ಮಂದಿಯ ಮೃತದೇಹಗಳಿಗಾಗಿ ಶೋಧ ಮುಂದುವರಿದಿದೆ.

ಹತ್ಯೆಯ ಬಳಿಕ ಮನೆಯಲ್ಲಿದ್ದ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿ, ರುಬ್ಬುಗುಂಡನ್ನೂ ತೊಳೆದು ಇಟ್ಟಿದ್ದಾನೆ. ಮೃತದೇಹಗಳನ್ನು ಸಾಗಿಸಲು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆಗೆ ಸಂಬಂಧಿಸಿದ ಸಂಪೂರ್ಣ ಹಿನ್ನೆಲೆ, ಸಾಕ್ಷ್ಯಗಳು ಮತ್ತು ಇತರ ವಿವರಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Related Articles

Back to top button