*ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಇನ್ಮುಂದೆ ‘ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ*: *ಹೆಸರು ಬದಲಾವಣೆಗೆ 10 ಕೋಟಿಗೂ ಹೆಚ್ಚು ವೆಚ್ಚ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ‘ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಹಲವು ವರ್ಷಗಳ ಬೇಡಿಕೆ ಹಾಗೂ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಸತತ ಪ್ರಯತ್ನಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.
2019ರ ಸೆಪ್ಟೆಂಬರ್ 17ರಂದು ಹೈದರಾಬಾದ್ ಕರ್ನಾಟಕವನ್ನು ‘ಕಲ್ಯಾಣ ಕರ್ನಾಟಕ’ ಎಂದು ಮರುನಾಮಕರಣ ಮಾಡಲಾಗಿತ್ತು. ಅದರಂತೆ ಅಲ್ಲಿನ ರಸ್ತೆ ಸಾರಿಗೆ ಸಂಸ್ಥೆಗೂ ಕಲ್ಯಾಣ ಕರ್ನಾಟಕ ಎಂಬ ಹೆಸರನ್ನು ನೀಡಲಾಗಿತ್ತು. ಇದೇ ಮಾದರಿಯಲ್ಲಿ ಮುಂಬೈ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತ್ತು.
2021ರ ಆಗಸ್ಟ್ 8ರಂದು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಬೊಮ್ಮಾಯಿ ಅವರ ನಿವಾಸದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಬಳಿಕ ಅಕ್ಟೋಬರ್ 23ರಂದು ಕಿತ್ತೂರು ವಿಜಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂಬೈ ಕರ್ನಾಟಕಕ್ಕೆ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದ್ದರು. ನವೆಂಬರ್ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಇದಕ್ಕೆ ಅನುಮೋದನೆ ನೀಡಲಾಗಿತ್ತು.
ಆದರೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ಮಾತ್ರ ಬದಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ 2024ರಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಅವರು ಸಂಸ್ಥೆಯ ಅಧ್ಯಕ್ಷರಾದ ಸಂದರ್ಭದಲ್ಲಿ ಕ್ರಿಯಾ ಸಮಿತಿಯ ವತಿಯಿಂದ ಮನವಿ ಸಲ್ಲಿಸಿ, ಸಂಸ್ಥೆಗೆ ‘ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡುವಂತೆ ಒತ್ತಾಯಿಸಲಾಗಿತ್ತು.
2024ರ ಫೆಬ್ರವರಿಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ‘ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ’ ಎಂದು ಹೆಸರಿಡಲು ನಿರ್ಧರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸಂಸ್ಥೆಯ ವ್ಯಾಪ್ತಿಗೆ ಬರುವ ಏಳು ಜಿಲ್ಲೆಗಳ ಸುಮಾರು 5,500 ಬಸ್ಗಳು, ಬಸ್ ನಿಲ್ದಾಣಗಳು ಹಾಗೂ ಅಧಿಕೃತ ದಾಖಲೆಗಳಲ್ಲಿ ಹೆಸರು ಬದಲಾಯಿಸಲು ಅಂದಾಜು 8 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಸರ್ಕಾರಕ್ಕೆ ತಿಳಿಸಲಾಗಿತ್ತು. ಆದರೆ ಸುಮಾರು ಒಂದೂವರೆ ವರ್ಷ ಈ ಕುರಿತು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿರಲಿಲ್ಲ.
ನಂತರ ಸಂಸ್ಥೆಯ ಉಪಾಧ್ಯಕ್ಷರಾಗಿ ಸುನಿಲ್ ಹನುಮನ್ನವರ ಅಧಿಕಾರ ವಹಿಸಿಕೊಂಡ ಬಳಿಕವೂ ಮರುನಾಮಕರಣದ ಪ್ರಯತ್ನ ಮುಂದುವರಿಯಿತು. ಸುನಿಲ್ ಹನುಮನ್ನವರ ಹಾಗೂ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರು ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಬೇಡಿಕೆಗೆ ಮರುಜೀವ ನೀಡಿದರು.
ಕೊನೆಗೂ ಕಳೆದ ಅಕ್ಟೋಬರ್ 23ರಂದು ಕಿತ್ತೂರು ಉತ್ಸವದಲ್ಲಿ ಮುಖ್ಯಮಂತ್ರಿ ಅವರು ಮರುನಾಮಕರಣದ ನಿರ್ಧಾರ ಪ್ರಕಟಿಸಿದ್ದರು. ಇದೀಗ ನವೆಂಬರ್ 5ರಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸುವ ಮೂಲಕ ಬೇಡಿಕೆಗೆ ಮನ್ನಣೆ ನೀಡಿದೆ. ಹೆಸರು ಬದಲಾವಣೆಗೆ ಬರೋಬ್ಬರಿ 10 ಕೋಟಿಗೂ ಅಧಿಕ ವೆಚ್ಚವಾಗಲಿದೆ ಎಂದು ತಿಳಿದುಬಂದಿದೆ.
ನವೆಂಬರ್ ಅಂತ್ಯದೊಳಗೆ ಬೆಳಗಾವಿಯಲ್ಲಿಯೇ ಮರುನಾಮಕರಣ ಸಮಾರಂಭ ಆಯೋಜಿಸುವಂತೆ ಸುನಿಲ್ ಹನುಮನ್ನವರ ಅವರಿಗೆ ಮನವಿ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಎರಡು ವರ್ಷಗಳ ನಿರಂತರ ಹೋರಾಟ ಹಾಗೂ ಪ್ರಯತ್ನಕ್ಕೆ ಕೊನೆಗೂ ಫಲ ದೊರೆತಿದೆ ಎಂದು ಸಮಿತಿಯ ಮುಖಂಡರು ತಿಳಿಸಿದ್ದಾರೆ.




