*ಸ್ಟಿಂಗ್ ಆಪರೇಷನ್ ಪ್ರಕರಣ*: *ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸ್ಫೋಟಕ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ಆರೋಪಿಯೊಬ್ಬರ ಮೊಬೈಲ್ ನೆಟ್‌ವರ್ಕ್ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ ಎಂಬ ಸ್ಫೋಟಕ ವಿಚಾರವನ್ನು ಸಚಿವ ಯತೀಂದ್ರ ಸಿದ್ದರಾಮಯ್ಯ ಬಹಿರಂಗಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ಪೊಲೀಸ್ ಕಮಿಷನರ್ ಈಗಾಗಲೇ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಟಿಂಗ್ ಆಪರೇಷನ್‌ಗೆ ಸಂಬಂಧಿಸಿದ ವಿಡಿಯೋವನ್ನು ಅಪ್‌ಲೋಡ್ ಮಾಡಿಸಿದ ವ್ಯಕ್ತಿಯ ಮೊಬೈಲ್ ಕುಮಾರಸ್ವಾಮಿ ಅವರ ನಿವಾಸದಲ್ಲಿ ಟ್ರೇಸ್ ಆಗಿದೆ ಎಂಬ ಮಾಹಿತಿ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಿದ್ದಾರೆ.
ಪ್ರಕರಣದ ತನಿಖೆಯ ಬಗ್ಗೆ ಸಂಪೂರ್ಣ ವಿಶ್ವಾಸವಿದೆ ಎಂದಿರುವ ಯತೀಂದ್ರ, ಸರ್ಕಾರದ ಮೇಲೂ ನಂಬಿಕೆ ವ್ಯಕ್ತಪಡಿಸಿದ್ದಾರೆ. ಯಾರೇ ತಪ್ಪಿತಸ್ಥರಾಗಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಸ್ಟಿಂಗ್ ಆಪರೇಷನ್ ನಡೆಸಿದವರ ವಿರುದ್ಧ ಮಾತ್ರವಲ್ಲದೆ, ಉದ್ದೇಶಪೂರ್ವಕವಾಗಿ ವಿಡಿಯೋ ಹರಡಿ ವ್ಯಕ್ತಿಗಳ ತೇಜೋವಧೆ ಮಾಡಲು ಪ್ರಯತ್ನಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಯಾವುದೇ ರಾಜಕಾರಣಿಯ ಮೇಲೆ ಆರೋಪ ಕೇಳಿಬಂದಾಗ ಅದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟಿರುವ ಯತೀಂದ್ರ, ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು ಎಂದು ಹೇಳಿದ್ದಾರೆ.


