Belagavi NewsBelgaum NewsKannada NewsKarnataka News

*ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಿ*: *ಬೆಳಗಾವಿಯಲ್ಲಿ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ವಿವಿಧ ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಆದ್ಯತೆ ನೀಡಬೇಕು. ಹೊರರಾಜ್ಯಗಳಿಂದ ಬಂದವರಿಗೆ ಉನ್ನತ ಹುದ್ದೆಗಳನ್ನು ನೀಡುವ ಮೂಲಕ ಸ್ಥಳೀಯ ಅರ್ಹ ಕನ್ನಡಿಗ ಯುವಜನರಿಗೆ ಅನ್ಯಾಯ ಮಾಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಿತ್ತೂರು ಕರ್ನಾಟಕ ಸೇನೆಯ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಚೆನ್ನಮ್ಮ ವೃತ್ತದಲ್ಲಿ ಕಿತ್ತೂರು ಕರ್ನಾಟಕ ಸೇನೆಯ ಮಹೇಶ ಶಿಗಿಹಳ್ಳಿ ಅವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಜಿಲ್ಲೆಯ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.

ಬೆಳಗಾವಿ ಜಿಲ್ಲೆಯಲ್ಲಿ ಸಾವಿರಾರು ವಿದ್ಯಾವಂತ ಹಾಗೂ ತಾಂತ್ರಿಕ ಕೌಶಲ್ಯ ಹೊಂದಿರುವ ಕನ್ನಡಿಗ ಯುವಕ-ಯುವತಿಯರಿದ್ದಾರೆ. ಪದವಿ, ಡಿಪ್ಲೊಮಾ ಸೇರಿದಂತೆ ವಿವಿಧ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿದ್ದರೂ ಅವರಿಗೆ ಸ್ಥಳೀಯ ಕೈಗಾರಿಕೆಗಳಲ್ಲಿ ನಿರೀಕ್ಷಿತ ಉದ್ಯೋಗಾವಕಾಶಗಳು ಸಿಗುತ್ತಿಲ್ಲ. ಉದ್ಯೋಗಕ್ಕಾಗಿ ಕನ್ನಡಿಗ ಯುವಕರು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಹೊರರಾಜ್ಯಗಳಿಂದ ಆಗಮಿಸುವವರಿಗೆ ಕೈಗಾರಿಕೆಗಳಲ್ಲಿ ಹೆಚ್ಚಿನ ಅವಕಾಶಗಳು ಹಾಗೂ ಪ್ರಮುಖ ಹುದ್ದೆಗಳನ್ನು ನೀಡಲಾಗುತ್ತಿದೆ ಎಂಬುದು ಪ್ರತಿಭಟನಾಕಾರರ ಆರೋಪವಾಗಿದೆ.

ಸ್ಥಳೀಯವಾಗಿ ಕೈಗಾರಿಕೆಗಳು ಸ್ಥಾಪನೆಯಾಗಿ ಬೆಳವಣಿಗೆ ಕಾಣುತ್ತಿದ್ದರೂ ಅದರ ಪ್ರಯೋಜನ ಸ್ಥಳೀಯ ಯುವಜನರಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಸ್ಥಳೀಯ ಜನರ ಭೂಮಿ, ಸಂಪನ್ಮೂಲ ಹಾಗೂ ಸಹಕಾರವೂ ಪ್ರಮುಖ ಪಾತ್ರ ವಹಿಸುತ್ತಿದೆ. ಹೀಗಿರುವಾಗ ಅದೇ ಭಾಗದ ಕನ್ನಡಿಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡದಿರುವುದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಇನ್ನು ಕೆಲವು ಕೈಗಾರಿಕೆಗಳಲ್ಲಿ ಭಾಷೆಯ ಆಧಾರದ ಮೇಲೆ ತಾರತಮ್ಯ ನಡೆಯುತ್ತಿದೆ ಎಂಬ ಆರೋಪವನ್ನೂ ಕಾರ್ಯಕರ್ತರು ಮುಂದಿಟ್ಟರು. ಕನ್ನಡ ಮಾತನಾಡುವ ಕಾರ್ಮಿಕರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನಗತ್ಯ ನಿರ್ಬಂಧಗಳನ್ನು ವಿಧಿಸುವುದು, ಅವರಿಗೆ ಸೂಕ್ತ ಅವಕಾಶ ನೀಡದಿರುವುದು ಸರಿಯಲ್ಲ. ಕೈಗಾರಿಕೆಗಳಲ್ಲಿ ಕನ್ನಡ ಭಾಷೆಗೆ ಗೌರವ ನೀಡುವುದರ ಜತೆಗೆ ಕನ್ನಡಿಗ ಕಾರ್ಮಿಕರ ಹಕ್ಕುಗಳನ್ನೂ ರಕ್ಷಿಸಬೇಕು ಎಂದು ಆಗ್ರಹಿಸಿದರು.

ಕೇವಲ ಉದ್ಯೋಗ ನೇಮಕಾತಿಗೆ ಸೀಮಿತವಾಗದೆ, ಕೈಗಾರಿಕೆಗಳಲ್ಲಿನ ಉನ್ನತ ಆಡಳಿತಾತ್ಮಕ ಮತ್ತು ತಾಂತ್ರಿಕ ಹುದ್ದೆಗಳಲ್ಲಿಯೂ ಸ್ಥಳೀಯ ಅರ್ಹ ಕನ್ನಡಿಗರಿಗೆ ಪ್ರಾತಿನಿಧ್ಯ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಕೈಗಾರಿಕಾ ಆಡಳಿತ ಮಂಡಳಿಗಳು ಸ್ಪಷ್ಟ ನೀತಿ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಕನ್ನಡ ಸರ್ಕಾರಿ ಶಾಲೆಗಳ ಖಾಸಗೀಕರಣ ಪ್ರಕ್ರಿಯೆಯನ್ನು ಕೈಬಿಡಬೇಕು ಎಂಬ ಬೇಡಿಕೆಯನ್ನೂ ಪ್ರತಿಭಟನಾಕಾರರು ಮುಂದಿಟ್ಟರು. ಕನ್ನಡ ಭಾಷೆ, ಕನ್ನಡಿಗರ ಅಸ್ತಿತ್ವ, ಸ್ಥಳೀಯ ಯುವಜನರ ಉದ್ಯೋಗದ ಹಕ್ಕು ಹಾಗೂ ಸರ್ಕಾರಿ ಕನ್ನಡ ಶಾಲೆಗಳ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಕೈಗಾರಿಕೆಗಳ ಬೆಳವಣಿಗೆ ಎಂದರೆ ಕೇವಲ ಬಂಡವಾಳ ಹೂಡಿಕೆ ಮತ್ತು ಉತ್ಪಾದನೆ ಹೆಚ್ಚಳವಲ್ಲ. ಆ ಕೈಗಾರಿಕೆಗಳಿಂದ ಸ್ಥಳೀಯ ಜನರಿಗೂ ಉದ್ಯೋಗ, ಆರ್ಥಿಕ ಭದ್ರತೆ ಮತ್ತು ಅಭಿವೃದ್ಧಿಯ ಅವಕಾಶಗಳು ಸಿಗಬೇಕು. ಕನ್ನಡಿಗರನ್ನು ಉದ್ಯೋಗ ಕ್ಷೇತ್ರದಲ್ಲಿ ಕಡೆಗಣಿಸುವ ಪ್ರವೃತ್ತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಕಿತ್ತೂರು ಕರ್ನಾಟಕ ಸೇನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

Related Articles

Back to top button