Belagavi NewsBelgaum NewsCrimeKannada NewsKarnataka News

*ಸುಳ್ಳು ಸುದ್ದಿ ಹರಡಿಸಿದ ಬ್ಲಾಗರ್ ವಿರುದ್ಧ ಬೆಳಗಾವಿ ಪೊಲೀಸರ ಆಕ್ಷನ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿಸುವ ಮೂಲಕ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುವವರ ವಿರುದ್ಧ ಬೆಳಗಾವಿ ನಗರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ರೈತ ಪ್ರತಿಭಟನೆ ವೇಳೆ ಸುಳ್ಳು ಸದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸಿದ ಆರೋಪದ ಹಿನ್ನೆಲೆಯಲ್ಲಿ, ಇನ್ಸ್ಟಾಗ್ರಾಮ್ ಖಾತೆ ನಿರ್ವಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನವೆಂಬರ್ 5ರಂದು ರೈತರು ಬೆಳಗಾವಿಯ ‘ಜೈಲ್ ಭರೋ’ ಕಾರ್ಯಕ್ರಮಕ್ಕೆ ಕರೆ ನೀಡಿದ್ದ ಸಂದರ್ಭದಲ್ಲಿ, ಹಲವು ಭಾಗಗಳಲ್ಲಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿರಂತರವಾಗಿ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು. ಇದೇ ವೇಳೆ ರೈತ ಹೋರಾಟದ ಬಗ್ಗೆ ಆಕ್ಷೇಪಾರ್ಹ ಹಾಗೂ ತಪ್ಪು ಮಾಹಿತಿಯುಳ್ಳ ಸುದ್ದಿಯನ್ನು ಇನ್ಸ್ಟಾಗ್ರಾಮ್ ಖಾತೆ `ammu_vlog18` ಮೂಲಕ ಹರಿಬಿಡಲಾಗಿತ್ತು.

ಈ ಪೋಸ್ಟ್‌ನಿಂದ ರೈತರಲ್ಲಿ ಪ್ರಚೋದನೆ ಉಂಟಾಗುವ ಸಾಧ್ಯತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಆರೋಪಿಯ ವಿರುದ್ಧ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಠಾಣೆ ಪ್ರಕಾರ ಪ್ರಕರಣ ಸಂಖ್ಯೆ 175/2026, ಕಲಂ 192 ಬಿಎನ್‌ಎಸ್‌–2023 ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

ಯಾವುದೇ ವ್ಯಕ್ತಿ ಅಥವಾ ಸಂಘಟನೆ ರೈತರ ಹೋರಾಟ ಸೇರಿದಂತೆ ಸಾರ್ವಜನಿಕ ವಿಚಾರಗಳ ಕುರಿತು ಆಧಾರ ರಹಿತ ಹಾಗೂ ಸುಳ್ಳು ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದು ಕಾನೂನುಬಾಹಿರವಾಗಿದೆ. ಇಂತಹ ಕೃತ್ಯಗಳಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವುದರ ಜತೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವ ಮುನ್ನ ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Related Articles

Back to top button