*1.15 ಕೋಟಿ ಹವಾಲಾ ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್*: *ಪೊಲೀಸಪ್ಪನೇ ಮಾಸ್ಟರ್‌ಮೈಂಡ್?*

ಪ್ರಗತಿವಾಹಿನಿ ಸುದ್ದಿ: 1.15 ಕೋಟಿ ಹವಾಲಾ ಹಣ ದರೋಡೆ ಮತ್ತು ಅಪಹರಣ ಪ್ರಕರಣದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ಬಂಧನಕ್ಕೊಳಗಾಗಿದ್ದಾರೆ. ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ಶ್ರೀಶೈಲ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಸಿಬ್ಬಂದಿಯೇ ದರೋಡೆ ಸಂಚಿನಲ್ಲಿ ಭಾಗಿಯಾಗಿರುವ ಆರೋಪ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.
ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ ಹವಾಲಾ ಹಣವನ್ನು ದೋಚುವ ಉದ್ದೇಶದಿಂದ ಸತ್ಯನಾರಾಯಣ ಎಂಬವರನ್ನು ಅಪಹರಿಸಿ 1.15 ಕೋಟಿ ಹಣ ದರೋಡೆ ಮಾಡಲಾಗಿತ್ತು. ಈ ಸಂಬಂಧ ಸತ್ಯನಾರಾಯಣ ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ಪೊಲೀಸರು ತನಿಖೆ ಆರಂಭಿಸಿದ್ದರು.
ತನಿಖೆ ಮುಂದುವರಿದಂತೆ ಅಪಹರಣದ ಹಿಂದೆ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಪೇದೆ ಶ್ರೀಶೈಲ್ ಅವರ ಸಂಚು ಇರುವ ಶಂಕೆ ವ್ಯಕ್ತವಾಗಿದೆ. ಕಾರವಾರದ ಯುವಕರನ್ನು ಬಳಸಿಕೊಂಡು ಅಪಹರಣಕ್ಕೆ ಯೋಜನೆ ರೂಪಿಸಿದ್ದರು ಎಂಬ ಆರೋಪ ಇವರ ಮೇಲೆ ಕೇಳಿ ನಂದಿದೆ.
ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೋಳಂಕರ್ ಎಂಬ ಯುವಕನನ್ನು ಈ ಕೃತ್ಯಕ್ಕೆ ಬಳಸಿಕೊಳ್ಳಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿ ಎನ್ನಲಾಗಿರುವ ಗಣೇಶ ಕೋಳಂಕರ್‌ಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇತ್ತ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಪೇದೆ ಶ್ರೀಶೈಲ್ ಅವರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅಮಾನತುಗೊಳಿಸಿದ್ದಾರೆ.
ಹವಾಲಾ ಹಣದ ದರೋಡೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೇ ಸಂಚು ರೂಪಿಸಿದ್ದಾರೆ ಎಂಬ ಆರೋಪ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣದ ಸಂಪೂರ್ಣ ಜಾಲ ಹಾಗೂ ಹಣದ ಹಾದಿ ತನಿಖೆಯಿಂದ ಇನ್ನಷ್ಟೇ ಬಹಿರಂಗವಾಗಬೇಕಿದೆ.




