
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಹಾಗೂ ದೂರುಗಳ ಬಗ್ಗೆ ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ 15 ಸರ್ಕಾರಿ ನೌಕರರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಬೆಳಕಿಗೆ ಬಂದಿದೆ.
ವೃತ್ತ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು, ಎಂಜಿನಿಯರ್ಗಳು ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿಗಳನ್ನು ದಿಢೀರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೇ ಸಮಯಕ್ಕೆ ಸರಿಯಾಗಿ ಪರಿಹರಿಸದಿರುವುದು ಮತ್ತು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರದಿಸಲಾಗಿದೆ. ಬಿಹಾರ ಸರ್ಕಾರ ಅಧಿಕಾರಿಗಳ ವಿರುದ್ಧ ಇಂಥದ್ದೊಂದು ಮಹತ್ವದ ಕ್ರಮ ಕೈಗೊಂಡಿದೆ.
ಪಾಟ್ನಾದ ಕ್ಯಾಬಿನೆಟ್ ಸೆಕ್ರೆಟರಿಯೇಟ್ನಲ್ಲಿ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ‘ಸಹಯೋಗ’ ಸಾರ್ವಜನಿಕ ಕುಂದುಕೊರತೆ ಪರಿಹಾರ ಕಾರ್ಯಕ್ರಮದಲ್ಲಿ ಈ ಲೋಪಗಳು ಬೆಳಕಿಗೆ ಬಂದಿವೆ. ಜನರು ಸಲ್ಲಿಸಿದ ದೂರುಗಳನ್ನು ಪರಿಶೀಲಿಸಿದಾಗ, ಕೆಲವು ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬುದು ಗಮನಕ್ಕೆ ಬಂದಿದೆ.
ಕಂದಾಯ ಮತ್ತು ಭೂ ಸುಧಾರಣೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಮತ್ತು ವಸತಿ ಹಾಗೂ ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆಗಳ ಸಿಬ್ಬಂದಿ ಅಮಾನತುಗೊಂಡವರಲ್ಲಿ ಸೇರಿದ್ದಾರೆ.
ಸಾರ್ವಜನಿಕರ ದೂರುಗಳನ್ನು ಹಗುರವಾಗಿ ಪರಿಗಣಿಸಬಾರದು ಎಂದು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪ್ರತಿಯೊಬ್ಬ ನಾಗರಿಕನ ಸಮಸ್ಯೆಯನ್ನು ಪಾರದರ್ಶಕವಾಗಿ ಮತ್ತು ನಿಗದಿತ ಸಮಯದೊಳಗೆ ಪರಿಹರಿಸಬೇಕು. ಜನರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಅನಗತ್ಯ ವಿಳಂಬ ಮಾಡಬಾರದು ಎಂದು ಸೂಚಿಸಿದ್ದಾರೆ.
ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಖಡಕ್ ಆಗಿ ತಿಳಿಸಿದ್ದಾರೆ.




