*11 ದಿನದಲ್ಲಿ ಹಾಸನಾಂಬೆ ದರ್ಶನ ಪಡೆದ ಭಕ್ತರೆಷ್ಟು?*: *ಆದಾಯದ ಲೆಕ್ಕ ಕೇಳಿದ್ರೆ ಅಚ್ಚರಿ ಪಡ್ತೀರಾ!*

ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ಜಾತ್ರಾ ಮಹೋತ್ಸವ ಈ ಬಾರಿ ಹೊಸ ದಾಖಲೆ ಬರೆದಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಕೊನೆಯ ದಿನವೂ ದೇವಿಯ ದರ್ಶನಕ್ಕೆ ಭಕ್ತರ ದಂಡೇ ಹರಿದುಬಂದಿದೆ. ಇದೀಗ ಗರ್ಭಗುಡಿ ಬಾಗಿಲು ಮುಚ್ಚುವ ಸಮಯ ಸಮೀಪಿಸಿದೆ.
ಕಳೆದ 11 ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ 30 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯವರೆಗೂ ಭಕ್ತರಿಗೆ ನಿರಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಧ್ಯಾಹ್ನ 12 ಗಂಟೆಯ ನಂತರ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.
ಇನ್ನೊಂದೆಡೆ, ಕೆಲವೇ ಕ್ಷಣಗಳಲ್ಲಿ ಸಿದ್ದೇಶ್ವರಸ್ವಾಮಿ ಕೆಂಡೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯದ ಮುಂಭಾಗದಲ್ಲಿ ಅಪಾರ ಸಂಖ್ಯೆಯ ಭಕ್ತರು ನೆರೆದಿದ್ದಾರೆ. ಅಕ್ಟೋಬರ್ 30ರಿಂದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ 30 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ವಿಶೇಷ ದರ್ಶನದ 1,000 ರೂ. ಮತ್ತು 300 ರೂ. ಟಿಕೆಟ್ಗಳ ಮಾರಾಟ ಹಾಗೂ ಲಾಡು ಮಾರಾಟದಿಂದ ಒಟ್ಟು 25.36 ಕೋಟಿ ರೂ. ಆದಾಯ ಸಂಗ್ರಹವಾಗಿದೆ.




