CrimeKannada NewsKarnataka NewsLatest

*40 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದರೂ ಬದುಕುಳಿದ ಬೈಕ್ ಸವಾರ*: *ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ*

ಪ್ರಗತಿವಾಹಿನಿ ಸುದ್ದಿ: ಬೈಕ್ ಅಪಘಾತದ ದೃಶ್ಯ ನೋಡಿದರೆ ಎದೆ ಝಲ್ಲೆನ್ನುತ್ತದೆ. ಚಲಿಸುತ್ತಿದ್ದ ಬೈಕ್‌ಗಳ ನಡುವೆ ಡಿಕ್ಕಿಯಾಗಿ ಸವಾರನೊಬ್ಬ ಮೇಲ್ಸೇತುವೆಯಿಂದ ಕೆಳಕ್ಕೆ ಹಾರಿದ್ದಾನೆ. ಸುಮಾರು 40 ಅಡಿ ಎತ್ತರದಿಂದ ಬಿದ್ದರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಘಟನೆಯ ಸಿಸಿಟಿವಿ ದೃಶ್ಯ ಇದೀಗ ವೈರಲ್‌ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಫ್ಲೈಓವರ್‌ನ ಮಧ್ಯಭಾಗದಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆರ್ವಿನ್ ಅತ್ತಾವರ ಎಂಬ ಬೈಕ್ ಸವಾರ ನಿಯಂತ್ರಣ ತಪ್ಪಿ ಮೇಲ್ಸೇತುವೆಯಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದಿದ್ದಾನೆ. ಆ ಕ್ಷಣದಲ್ಲಿ ರಸ್ತೆಯಲ್ಲಿ ಯಾವುದೇ ವಾಹನ ಸಂಚರಿಸದ ಕಾರಣ ಭಾರೀ ಅನಾಹುತ ತಪ್ಪಿದೆ.

ಆರ್ವಿನ್ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಬರಲು ಬುಲೆಟ್ ಬೈಕ್‌ನಲ್ಲಿ ಹಾಸನಕ್ಕೆ ತೆರಳಿ ಹಿಂದಿರುಗುತ್ತಿದ್ದ. ಆತ ಮತ್ತು ಸ್ನೇಹಿತೆ ಪ್ರತ್ಯೇಕ ಬೈಕ್‌ಗಳಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಆರ್ವಿನ್ ರೈಡಿಂಗ್ ಗೇರ್ ಧರಿಸಿದ್ದರಿಂದ ಹೆಚ್ಚಿನ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ಮೇಲ್ಸೇತುವೆಯಿಂದ ಸವಾರ ಕೆಳಕ್ಕೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಯ ಪಕ್ಕದಲ್ಲಿದ್ದವರು ಏಕಾಏಕಿ ಮೇಲಿನಿಂದ ವ್ಯಕ್ತಿಯೊಬ್ಬ ಬಿದ್ದಿದ್ದನ್ನು ಕಂಡು ಕೆಲಕಾಲ ಗಾಬರಿಗೊಂಡಿದ್ದಾರೆ. ಬಳಿಕ ತಕ್ಷಣವೇ ಆತನ ನೆರವಿಗೆ ಧಾವಿಸಿದ್ದಾರೆ.

ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button