*ಬೈಕ್ಗೆ ಹಿಂಬದಿಯಿಂದ ಕಾರು ಡಿಕ್ಕಿ*: *ಒಂದೂವರೆ ವರ್ಷದ ಮಗು ಸೇರಿ ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಶುಭಕಾರ್ಯ ಮುಗಿಸಿ ಮನೆಗೆ ಮರಳುತ್ತಿದ್ದ ಕುಟುಂಬಕ್ಕೆ ವಿಧಿ ಕ್ರೂರವಾಗಿ ಕಾಡಿದೆ. ಹಿಂಬದಿಯಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ ಮತ್ತು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಗಳಾದ ತಾಯಮ್ಮ (55), ಜ್ಯೋತಿ (28) ಹಾಗೂ ಒಂದೂವರೆ ವರ್ಷದ ಮಗು ದಿವ್ಯ ಮೃತಪಟ್ಟವರು.
ಮೆಟ್ರಿ ಗ್ರಾಮದ ಲಕ್ಷ್ಮಣ್ ಅವರ ಕುಟುಂಬದವರು ಕೊಟಗಿನಾಳ್ ಗ್ರಾಮದಲ್ಲಿ ನಡೆದ ಶುಭಕಾರ್ಯದಲ್ಲಿ ಭಾಗವಹಿಸಿ ಸ್ವಗ್ರಾಮಕ್ಕೆ ಮರಳುತ್ತಿದ್ದರು. ಇಬ್ಬರು ಮಕ್ಕಳು ಸೇರಿದಂತೆ ಐವರು ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಧರ್ಮಸಾಗರ ಗ್ರಾಮದ ಬಳಿ ವೇಗವಾಗಿ ಬಂದ ಕಾರು ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಬೈಕ್ನಲ್ಲಿದ್ದ ತಾಯಮ್ಮ, ಜ್ಯೋತಿ ಹಾಗೂ ಮಗು ದಿವ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಾಲನೆ ಮಾಡುತ್ತಿದ್ದ ಲಕ್ಷ್ಮಣ್ ಹಾಗೂ ಅವರ ಪುತ್ರಿ ಸೃಷ್ಟಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಜ್ಯೋತಿ ಮತ್ತು ಲಕ್ಷ್ಮಣ್ ದಂಪತಿಗೆ ದಿವ್ಯ ಹಾಗೂ ಸೃಷ್ಟಿ ಎಂಬ ಇಬ್ಬರು ಮಕ್ಕಳಿದ್ದರು. ಅಪಘಾತದಲ್ಲಿ ತಾಯಿ ಹಾಗೂ ಒಂದು ಮಗು ಮೃತಪಟ್ಟರೆ, ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿರುವುದು ಕುಟುಂಬಸ್ಥರ ಆಕ್ರಂದನಕ್ಕೆ ಕಾರಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗುರುರಾಜ್ ಕಟ್ಟಿಮನಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.




