CrimeKannada NewsKarnataka News

*ದೀಪಾವಳಿ ಪಟಾಕಿ ಕಿಡಿಗೆ ಹೊತ್ತಿ ಉರಿದ 6 ಕಾರುಗಳು*: *ಪೊಲೀಸ್ ಠಾಣೆಯ ಆವರಣದಲ್ಲೇ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಸಂಭ್ರಮದ ನಡುವೆ ಸಿಡಿಸಿದ ಪಟಾಕಿಯ ಕಿಡಿ ಭಾರೀ ಅವಘಡಕ್ಕೆ ಕಾರಣವಾಗಿದ್ದು, ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ಆರು ಕಾರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ನಡೆದಿದೆ.

ಹುಮ್ನಾಬಾದ್ ಪೊಲೀಸ್ ಠಾಣೆಯ ಆವರಣದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ವಶಪಡಿಸಿಕೊಂಡಿದ್ದ ಆರು ಕಾರುಗಳನ್ನು ಕಳೆದ ಎರಡು ವರ್ಷಗಳಿಂದ ನಿಲ್ಲಿಸಲಾಗಿತ್ತು. ದೀಪಾವಳಿ ಹಿನ್ನೆಲೆಯಲ್ಲಿ ಸಿಡಿಸಿದ ಪಟಾಕಿಯಿಂದ ಹಾರಿದ ಕಿಡಿ ಕಾರುಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ನೋಡನೋಡುತ್ತಿದ್ದಂತೆ ಬೆಂಕಿ ಆರು ಕಾರುಗಳಿಗೂ ವ್ಯಾಪಿಸಿದ್ದು, ವಾಹನಗಳು ಧಗಧಗನೆ ಹೊತ್ತಿ ಉರಿದಿವೆ. ಇದರಿಂದ ಪೊಲೀಸ್ ಠಾಣೆಯ ಸುತ್ತಮುತ್ತ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಆರು ಕಾರುಗಳು ಬಹುತೇಕ ಸುಟ್ಟು ಕರಕಲಾಗಿದ್ದವು.

ದೀಪಾವಳಿ ಸಂಭ್ರಮದಲ್ಲಿ ಪಟಾಕಿ ಸಿಡಿಸುವಾಗ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಈ ಘಟನೆ ಮತ್ತೊಮ್ಮೆ ಎಚ್ಚರಿಕೆ ನೀಡಿದೆ.

Related Articles

Back to top button