
ಪ್ರಗತಿವಾಹಿನಿ ಸುದ್ದಿ: ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.
ಇಂದು ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿ ಅವರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಳೆದ ಹತ್ತು ದಿನಗಳಿಂದಲೇ ಎಸ್ಪಿಜಿ ತಂಡವು ಪ್ರಧಾನಿ ಸಂಚರಿಸುವ ಮಾರ್ಗಗಳು, ಮೆಟ್ರೋ ನಿಲ್ದಾಣಗಳು ಹಾಗೂ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಪರಿಶೀಲಿಸಿ ಭದ್ರತಾ ವ್ಯವಸ್ಥೆಗಳನ್ನು ರೂಪಿಸಿದೆ.
ಈ ಹಿಂದೆ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಪ್ರಧಾನಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾರ್ಗಮಧ್ಯೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದ ಪ್ರಕರಣ ಭದ್ರತಾ ಪಡೆಗಳಿಗೆ ಎಚ್ಚರಿಕೆಯ ಗಂಟೆಯಾಗಿತ್ತು. ಹೀಗಾಗಿ ಈ ಬಾರಿ ಯಾವುದೇ ಲೋಪವಾಗದಂತೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಪ್ರಧಾನಿ ಸಂಚರಿಸುವ ಮಾರ್ಗದುದ್ದಕ್ಕೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಎತ್ತರದ ಕಟ್ಟಡಗಳ ಮೇಲೆ ಭದ್ರತಾ ಸಿಬ್ಬಂದಿ ನಿಗಾ ಇರಿಸಲಿದ್ದಾರೆ. ಅಲ್ಲದೆ, ಮಾರ್ಗದ ಸುತ್ತಮುತ್ತಲಿನ ಪಿಜಿಗಳು, ಹೋಟೆಲ್ಗಳು ಹಾಗೂ ಅಪಾರ್ಟ್ಮೆಂಟ್ಗಳಲ್ಲಿಯೂ ತಪಾಸಣೆ ನಡೆಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಬೃಹತ್ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ಕಾರ್ಯಕ್ಕೆ 3 ಜಂಟಿ ಪೊಲೀಸ್ ಆಯುಕ್ತರು, 15 ಡಿಸಿಪಿಗಳು, 20 ಎಸಿಪಿಗಳು, 100 ಇನ್ಸ್ಪೆಕ್ಟರ್ಗಳು, 200ಕ್ಕೂ ಹೆಚ್ಚು ಪಿಎಸ್ಐಗಳು ಸೇರಿದಂತೆ 1,500ಕ್ಕೂ ಅಧಿಕ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ.
ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹಾಗೂ ಭದ್ರತಾ ತಪಾಸಣೆಗಳು ಹೆಚ್ಚಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಪೊಲೀಸರ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.


