Kannada NewsKarnataka NewsLatestNational

*ಕಾಡಿನಲ್ಲಿ ಅನುಮಾನಾಸ್ಪದ ಓಡಾಟ*: *ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ವ್ಯಕ್ತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಎರಡು ಹ್ಯಾಂಡ್ ಗ್ರೆನೇಡ್‌ಗಳೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಿವೆ. ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವೇಳೆ ಈತ ಭದ್ರತಾ ಪಡೆಗಳ ಬಲೆಗೆ ಬಿದ್ದಿದ್ದಾನೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ತಂಗ್‌ಮಾರ್ಗ್‌ನ ಬದರ್‌ಕೋಟ್ ಅರಣ್ಯ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತನನ್ನು ಗುಲಾಂ ಜೀಲಾನಿ ರೇಶಿ ಎಂದು ಗುರುತಿಸಲಾಗಿದೆ. ಆತನ ಚಲನವಲನಗಳ ಮೇಲೆ ಅನುಮಾನಗೊಂಡ ಭದ್ರತಾ ಪಡೆಗಳು ವಶಕ್ಕೆ ಪಡೆದು ಪರಿಶೀಲನೆ ನಡೆಸಿವೆ.

ಈ ವೇಳೆ ಆತನ ಬಳಿಯಿಂದ ಒಂದು ಹ್ಯಾಂಡ್ ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಬಳಿಕ ವಿಚಾರಣೆ ವೇಳೆ ಆತ ನೀಡಿದ ಮಾಹಿತಿಯ ಆಧಾರದಲ್ಲಿ ಅರಣ್ಯ ಪ್ರದೇಶದಲ್ಲಿ ಅಡಗಿಸಿಟ್ಟಿದ್ದ ಮತ್ತೊಂದು ಹ್ಯಾಂಡ್ ಗ್ರೆನೇಡ್ ಅನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ತಂಗ್‌ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗ್ರೆನೇಡ್‌ಗಳು ಎಲ್ಲಿಂದ ಬಂದವು? ಅವುಗಳನ್ನು ಯಾವ ಉದ್ದೇಶಕ್ಕಾಗಿ ಬಳಸಲು ಯೋಜಿಸಲಾಗಿತ್ತು? ಈ ಪ್ರಕರಣದಲ್ಲಿ ಬೇರೆ ಯಾರಾದರೂ ಸಂಪರ್ಕ ಹೊಂದಿದ್ದಾರೆಯೇ ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button