*ಮೋದಿ ಆಗಮನದ ಬೆನ್ನಲ್ಲೇ ಘೋಷಣೆ ವಾರ್*: *ಮೋದಿ ಮೋದಿ ವಿರುದ್ಧ ಡಿಕೆ ಡಿಕೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘೋಷಣೆಗಳ ಸಮರ ಶುರುವಾಗಿದೆ. ಬಿಳೇಕಲ್ಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾಗಿ ಪರಸ್ಪರ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತರಿಂದ ‘ಮೋದಿ ಮೋದಿ’ ಘೋಷಣೆ ಮೊಳಗಿದರೆ, ಕಾಂಗ್ರೆಸ್ ಕಾರ್ಯಕರ್ತರು ‘ಡಿಕೆ ಡಿಕೆ’ ಎಂದು ಕೂಗಿ ತಿರುಗೇಟು ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಬಳಿಕ ಹೆಲಿಕಾಪ್ಟರ್ ಮೂಲಕ ಜಿಗಣಿಯ ಪ್ರಶಾಂತಿ ಕುಟೀರಕ್ಕೆ ತೆರಳಿದರು. ಅಲ್ಲಿ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥೆ (S-VYASA)ಯ 50ನೇ ವರ್ಷದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಗುಲಾಬಿ ಮಾರ್ಗದ ನಮ್ಮ ಮೆಟ್ರೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ರಾಜಕೀಯ ನಾಯಕರ ಹಾಗೂ ಕಾರ್ಯಕರ್ತರ ಚಟುವಟಿಕೆಗಳು ಹೆಚ್ಚಾಗಿವೆ.
ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಕ್ಷಣಗಣನೆ
ಬೆಂಗಳೂರಿನ ಬಹುನಿರೀಕ್ಷಿತ ಗುಲಾಬಿ ಮಾರ್ಗದ ಮೆಟ್ರೋ ರೈಲು ಉದ್ಘಾಟನೆಗೆ ಸಿದ್ಧತೆಗಳು ಪೂರ್ಣಗೊಂಡಿವೆ. ತಾವರೆಕೆರೆ ಮೆಟ್ರೋ ನಿಲ್ದಾಣ, ಅಂದರೆ ಎಸ್.ಜಿ. ಪಾಳ್ಯ ನಿಲ್ದಾಣದಿಂದ ಕಾಳೇನ ಅಗ್ರಹಾರವರೆಗಿನ ಪಿಂಕ್ ಲೈನ್ ಮಾರ್ಗವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
ಮೆಟ್ರೋ ಉದ್ಘಾಟನೆಗೂ ಮುನ್ನವೇ ಬಿಳೇಕಲ್ಲಹಳ್ಳಿ ಬಳಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಘೋಷಣೆಗಳ ಪೈಪೋಟಿ ಗಮನ ಸೆಳೆದಿದೆ. ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜಕೀಯ ಚಟುವಟಿಕೆಗಳೂ ಜೋರಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




