*ಉಡುಪಿಗೆ ಹೊಸ ಎಫ್ಎಂ ಕೇಂದ್ರ*: *ರೈಲ್ವೆ ನಿಲ್ದಾಣದ ಅಭಿವೃದ್ಧಿಗೂ ಕೇಂದ್ರ ಸಚಿವರ ಮಹತ್ವದ ಭರವಸೆ*

ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯ ಜನರಿಗೆ ಆಕಾಶವಾಣಿ ಪ್ರಸಾರ ಸೇವೆ ಮತ್ತಷ್ಟು ಹತ್ತಿರವಾಗಲಿದೆ. ಸುಮಾರು 2.85 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಎಫ್ಎಂ ಪ್ರಸರಣ ಕೇಂದ್ರ ಕಾರ್ಯಾರಂಭಗೊಂಡಿದ್ದು, ಕೇಂದ್ರ ರೈಲ್ವೆ ಮತ್ತು ಮಾಹಿತಿ ಹಾಗೂ ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದ್ದಾರೆ. ಇದೇ ವೇಳೆ ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಾಗೂ ಕೊಂಕಣ ರೈಲ್ವೆ ವಿಲೀನದ ಬಗ್ಗೆಯೂ ಮಹತ್ವದ ಮಾಹಿತಿ ನೀಡಿದ್ದಾರೆ.
101.9 ಮೆಗಾಹರ್ಟ್ಸ್ನಲ್ಲಿ ಎಫ್ಎಂ ಪ್ರಸಾರ
ಉಡುಪಿಯಲ್ಲಿ ನಿರ್ಮಿಸಲಾಗಿರುವ ನೂತನ ಎಫ್ಎಂ ಪ್ರಸರಣ ಕೇಂದ್ರವು 1 ಕಿಲೋವ್ಯಾಟ್ ಸಾಮರ್ಥ್ಯ ಹೊಂದಿದೆ. 101.9 ಮೆಗಾಹರ್ಟ್ಸ್ ತರಂಗಾಂತರದಲ್ಲಿ ಪ್ರಸಾರ ಸೇವೆ ಒದಗಿಸಲಿದ್ದು, ಸುಮಾರು 30 ಕಿ.ಮೀ. ವ್ಯಾಪ್ತಿಯಲ್ಲಿ ಆಕಾಶವಾಣಿ ಕಾರ್ಯಕ್ರಮಗಳು ಲಭ್ಯವಾಗಲಿವೆ. ಇದರಿಂದ ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಉತ್ತಮ ಗುಣಮಟ್ಟದ ಪ್ರಸಾರ ಸೇವೆ ದೊರೆಯಲಿದೆ.
ನೂತನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಸಚಿವ ಅಶ್ವಿನಿ ವೈಷ್ಣವ್ ಉಡುಪಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದರು. ನಂತರ ಶ್ರೀಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು.
ಉಡುಪಿ ರೈಲ್ವೆ ನಿಲ್ದಾಣವನ್ನು ಸ್ಥಳೀಯ ಪಾರಂಪರಿಕ ಶೈಲಿಯಲ್ಲಿ ಮೇಲ್ದರ್ಜೆಗೇರಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು. ಕರಾವಳಿ ಭಾಗದ ಪ್ರಮುಖ ರೈಲ್ವೆ ನಿಲ್ದಾಣವಾಗಿರುವ ಉಡುಪಿಯನ್ನು ಅಭಿವೃದ್ಧಿಪಡಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಬೈಂದೂರು ರೈಲ್ವೆ ನಿಲ್ದಾಣದ ಅಭಿವೃದ್ಧಿಯ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದರು.
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆ ಕುರಿತು ಮಾತನಾಡಿದ ಸಚಿವರು, ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಅನುಮತಿ ಅಗತ್ಯವಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು, ಮಂಗಳೂರು ಮತ್ತು ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಕರಾವಳಿ ಭಾಗದ ಜನರ ಪ್ರಯಾಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿದೆ ಎಂದೂ ಅವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




