*ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ ಯುವ ಆಟಗಾರ್ತಿ ನಿಗೂಢ ಸಾವು*: *ಇಬ್ಬರು ಯುವಕರ ವಿರುದ್ಧ ದೂರ*

ಪ್ರಗತಿವಾಹಿನಿ ಸುದ್ದಿ: ಬಿಸಿಸಿಐ ಅಂಡರ್-19 ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ 17 ವರ್ಷದ ಪ್ರತಿಭಾವಂತ ಆಟಗಾರ್ತಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಕ್ರಿಕೆಟ್‌ನಲ್ಲಿ ಭವಿಷ್ಯ ರೂಪಿಸಿಕೊಳ್ಳುವ ಕನಸು ಕಂಡಿದ್ದ ಯುವತಿಯ ಹಠಾತ್ ಸಾವಿನಿಂದ ಕುಟುಂಬಸ್ಥರು, ತರಬೇತುದಾರರು ಹಾಗೂ ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.
ಮೃತ ಯುವತಿಯನ್ನು ನಂದಿನಿ (17) ಎಂದು ಗುರುತಿಸಲಾಗಿದೆ. ಮೂಲತಃ ತೆಲಂಗಾಣದ ಯಲಾಲ್ ಮಂಡಲದ ಸಂಗಾಯಪಲ್ಲಿ ಗ್ರಾಮದ ನಿವಾಸಿಯಾಗಿದ್ದ ನಂದಿನಿ, ವಿದ್ಯಾಭ್ಯಾಸದ ಜತೆಗೆ ಕ್ರಿಕೆಟ್ ತರಬೇತಿ ಪಡೆಯಲು ಅಜ್ಜಿಯೊಂದಿಗೆ ವಾಸವಾಗಿದ್ದಳು. ಇತ್ತೀಚೆಗಷ್ಟೇ ಬಿಸಿಸಿಐ ಅಂಡರ್-19 ಮಹಿಳಾ ತಂಡಕ್ಕೆ ಆಯ್ಕೆಯಾಗಿದ್ದ ಆಕೆ, ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡುವ ಕನಸು ಕಂಡಿದ್ದಳು. ಆದರೆ ಇದೀಗ ಆಕೆಯ ಮೃತದೇಹ ತೆಲಂಗಾಣದ ವಿಕಾರಾಬಾದ್ ಪಟ್ಟಣದ ಮಧು ಕಾಲೋನಿಯಲ್ಲಿ ಪತ್ತೆಯಾಗಿದೆ.
ನಂದಿನಿ ಸಾವಿಗೆ ನ್ಯಾಯ ದೊರಕಿಸಿಕೊಡುವಂತೆ ಕುಟುಂಬಸ್ಥರು ವಿಕಾರಾಬಾದ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅನಿಲ್ ಮತ್ತು ಕೃಷ್ಣ ಎಂಬ ಇಬ್ಬರು ಯುವಕರು ನಂದಿನಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಅನಿಲ್ ಪ್ರೀತಿಯ ಹೆಸರಿನಲ್ಲಿ ನಂದಿನಿಯನ್ನು ಹಿಂಬಾಲಿಸಿ ಕಾಡುತ್ತಿದ್ದ. ಆಕೆ ನಿರಾಕರಿಸಿದರೂ ಕಿರುಕುಳ ಮುಂದುವರಿಸಿದ್ದ. ಕೃಷ್ಣ ಎಂಬಾತ ಅನಿಲ್‌ಗೆ ಸಹಾಯ ಮಾಡುತ್ತಿದ್ದ ಎಂದು ಕುಟುಂಬಸ್ಥರು ದೂರಿದ್ದಾರೆ. ಈ ಇಬ್ಬರ ಕಿರುಕುಳದಿಂದಲೇ ನಂದಿನಿ ನೊಂದಿದ್ದಳು ಹಾಗೂ ಆಕೆಯ ಸಾವಿಗೆ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಂದಿನಿ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿಕಾರಾಬಾದ್ ಸರ್ಕಲ್ ಇನ್‌ಸ್ಪೆಕ್ಟರ್ ರಘು, ಬೆಳಗ್ಗೆ ಸುಮಾರು 9 ಗಂಟೆಗೆ ಯುವತಿಯ ಸಾವಿನ ಬಗ್ಗೆ ಮಾಹಿತಿ ಲಭಿಸಿತ್ತು. ತಕ್ಷಣವೇ ಪೊಲೀಸ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ತಂದೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ನಂದಿನಿ ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಯಾರಾದರೂ ಕಿರುಕುಳ ನೀಡಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮತ್ತು ವಾಟ್ಸ್‌ಆ್ಯಪ್ ಖಾತೆಗಳನ್ನು ಪರಿಶೀಲಿಸಿ, ತನಿಖೆಯಲ್ಲಿ ಲಭ್ಯವಾಗುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಂದಿನಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ. ಕಿರುಕುಳ, ಬೆದರಿಕೆ ಅಥವಾ ವೈಯಕ್ತಿಕ ಕಾರಣ ಸೇರಿದಂತೆ ಎಲ್ಲ ಆಯಾಮಗಳಲ್ಲೂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಯುವತಿಯ ಸಾವಿನ ಹಿಂದಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




