Kannada NewsKarnataka NewsLatestSports

*ಟೀಕೆಗಳಿಗೆ ಬ್ಯಾಟ್‌ನಲ್ಲೇ ಉತ್ತರ*: *21 ಎಸೆತಗಳಲ್ಲಿ ಸೂರ್ಯನ ಸ್ಫೋಟಕ 60 ರನ್*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಬ್ಯಾಟಿಂಗ್ ವೈಫಲ್ಯದಿಂದ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಮತ್ತೆ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ತಂಡದ ನಾಯಕನಾಗಿ ಕಣಕ್ಕಿಳಿದಿರುವ ಸೂರ್ಯ, ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಕಾಕಾರರಿಗೆ ಬ್ಯಾಟ್‌ನಲ್ಲೇ ಉತ್ತರ ನೀಡಿದ್ದಾರೆ.

ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದ ಕ್ಯಾಂಪಸ್ 2ನೇ ಮೈದಾನದಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಭರ್ಜರಿ ಗೆಲುವು ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20 ಓವರ್‌ಗಳಲ್ಲಿ 172 ರನ್‌ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಮುಂಬೈ ಕೇವಲ 13.1 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 174 ರನ್ ಗಳಿಸಿ ಗೆಲುವು ಸಾಧಿಸಿತು.

21 ಎಸೆತಗಳಲ್ಲಿ 60 ರನ್ ಸಿಡಿಸಿದ ಸೂರ್ಯ

ಮುಂಬೈ ನಾಯಕ ಸೂರ್ಯಕುಮಾರ್ ಯಾದವ್ ಕೇವಲ 21 ಎಸೆತಗಳಲ್ಲಿ ಐದು ಸಿಕ್ಸರ್ ಹಾಗೂ ಆರು ಬೌಂಡರಿಗಳ ನೆರವಿನಿಂದ ಅಜೇಯ 60 ರನ್ ಸಿಡಿಸಿದರು. ಬರೋಬ್ಬರಿ 285.71 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಸೂರ್ಯ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಅಮೋಘ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡರು.

ಇತ್ತೀಚಿನ ಬ್ಯಾಟಿಂಗ್ ವೈಫಲ್ಯದ ಹಿನ್ನೆಲೆಯಲ್ಲಿ ಸೂರ್ಯ ಟಿ20 ನಾಯಕತ್ವ ಕಳೆದುಕೊಂಡಿದ್ದರು. ಆದರೂ, ಯಾವುದೇ ಸಮಯದಲ್ಲಿ ಟೀಂ ಇಂಡಿಯಾ ಪರ ಆಡಲು ಸಿದ್ಧ ಎಂದು ಅವರು ಹೇಳಿದ್ದರು. ಇದೀಗ ಅವರ ಸ್ಫೋಟಕ ಇನ್ನಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಸಂಭ್ರಮ ಮೂಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button