CrimeKannada NewsKarnataka NewsLatest

*ಕೈಗಳನ್ನು ಶಾಲಿನಿಂದ ಕಟ್ಟಿಕೊಂಡು ಸೀತಾ ನದಿಗೆ ಹಾರಿದ ದಂಪತಿ*: *ಇಬ್ಬರ ಮೃತದೇಹ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಪತಿ-ಪತ್ನಿ ಪರಸ್ಪರ ಕೈಗಳನ್ನು ಕಟ್ಟಿಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ದಂಪತಿ ನದಿಗೆ ಹಾರುವುದನ್ನು ಕಂಡ ರಿಕ್ಷಾ ಚಾಲಕರೊಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಇಬ್ಬರ ಮೃತದೇಹಗಳು ಪತ್ತೆ ಹಚ್ಚಿದ್ದಾರೆ.

ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಮಾಬುಕಳ ಸೇತುವೆ ಬಳಿ ಈ ಘಟನೆ ನಡೆದಿದೆ. ಮೃತರನ್ನು ಮೂಲತಃ ತುಮಕೂರು ಜಿಲ್ಲೆಯವರಾದ ಶ್ರೀನಿವಾಸ್ ಮೂರ್ತಿ ಹೆಚ್. (52) ಹಾಗೂ ಗಂಗಾ (48) ಎಂದು ಗುರುತಿಸಲಾಗಿದೆ.

ದಂಪತಿ ನದಿಗೆ ಹಾರುವುದನ್ನು ಗಮನಿಸಿದ ರಿಕ್ಷಾ ಚಾಲಕ ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಪರಿಶೀಲಿಸಿದಾಗ ದಂಪತಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ನದಿಯಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

ಬಳಿಕ ಮಾಬುಕಳ ಸೇತುವೆಯಿಂದ ಸುಮಾರು 500 ಮೀಟರ್ ದೂರದಲ್ಲಿರುವ ಪಾಂಡೇಶ್ವರದ ಸೀತಾ ನದಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಆತ್ಮಹತ್ಯೆಗೂ ಮುನ್ನ ದಂಪತಿ ತಮ್ಮ ಕೈಗಳನ್ನು ಚೂಡಿದಾರದ ಶಾಲಿನಿಂದ ಪರಸ್ಪರ ಕಟ್ಟಿಕೊಂಡಿದ್ದರು ಎನ್ನಲಾಗಿದ್ದು, ಅದೇ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಘಟನಾ ಸ್ಥಳಕ್ಕೆ ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ್ ಕುಮಾರ್ ಆರ್. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕೋಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

Back to top button