Kannada NewsKarnataka NewsLatest

*ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ ಇತ್ಯರ್ಥಗೊಳಿಸಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಏಪ್ರಿಲ್ ನಲ್ಲಿ ಸಿಇಟಿ ಪರೀಕ್ಷೆಯ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣವನ್ನು ರಾಜ್ಯ ಹೈಕೋರ್ಟ್ ಇತ್ಯರ್ಥಗೊಳಿಸಿದೆ.

ಸಿಇಟಿ ಪ್ರವೇಶ ಪರೀಕ್ಷೆಯ ವೇಳೆ ಬೆಂಗಳೂರಿನ ಕೃಪಾನಿಧಿ ಕಾಲೇಜು ಸೇರಿ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ್ದ ಪ್ರಕರಣ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಈ ಸಂಬಂಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿತ್ತು. ಈ ಪಿಐಎಲ್ ಗೆ ಕೆಇಎ (ಕರ್ನಾಟಕ ಪರೀಕ್ಷ ಅಪ್ರಾಧಿಕಾರ) ಸಲ್ಲಿಸಿದ ಲಿಖಿತ ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್, ಇಂದು ಪ್ರಕರಣವನ್ನು ಇತ್ಯರ್ಥ ಮಾಡಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಕೆಇಎ, ಜನಿವಾರ ತೆಗೆಸುವಂತೆ ಯಾವುದೇ ಸೂಚನೆ ನೀಡಲಾಗಿಲ್ಲ. ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತಗಳಿಗೂ ಅಗತ್ಯ ಸೂಚನೆಗಳನ್ನು ಒದಗಿಸಲಾಗಿದೆ. ಮಾನವ ಹಕ್ಕುಗಳ ಆಯೋಗಕ್ಕೂ ವರದಿ ಸಲ್ಲಿಸಲಾಗಿದೆ. ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೂ ಕೈಗೊಂಡ ಕ್ರಮ ಮಾಹಿತಿ ನೀಡಲಾಗಿದೆ ಎಂದು ಮಾಹಿತಿ ನೀಡಿದೆ. ಈ ಹೇಳಿಕೆ ಮಾಹಿತಿ ದಾಖಲಿಸಿಕೊಂಡ ಹೈಕೋರ್ಟ್, ಸುವ್ಯವಸ್ಥಿತ, ಏಕರೂಪ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿ ಪಿಐಎಲ್ ಇತ್ಯರ್ಥ ಮಾಡಿದೆ.

2025ರ ಏಪ್ರಿಲ್‌ನಲ್ಲಿ ನಡೆದಿದ್ದ ಸಿಇಟಿ ಪರೀಕ್ಷೆಯ ವೇಳೆ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ ಆರೋಪ ಕೇಳಿಬಂದಿತ್ತು. ಈ ಸಂಬಂಧ ಕೆಇಎ ವರದಿ ಕೇಳಿ, ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಚನೆ ನೀಡಿತ್ತು. ಇದಾದ ಬಳಿಕ ಮತ್ತೆ 2026ರ ಏಪ್ರಿಲ್ 23ರಂದು ಬೆಂಗಳೂರಿನ ಕೋರಮಂಗಲದ (ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿ) ಕೃಪಾನಿಧಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿಯೂ ಇಂತಹದ್ದೇ ಘಟನೆ ಮರುಕಳಿಸಿತ್ತು.

ಈ ಸಂಬಂಧ ಪೋಷಕರ ದೂರಿನ ಮೇರೆಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಿ, ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ನ್ಯಾಯಾಲಯವು ಆ ಸಿಬ್ಬಂದಿಗೆ ಜಾಮೀನು ಮಂಜೂರು ಮಾಡಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಧಾರ್ಮಿಕ ಚಿಹ್ನೆಗಳನ್ನು ತೆಗೆಸುವುದನ್ನು ಪ್ರಶ್ನಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

Related Articles

Back to top button