*ಕಾಡಾನೆ ದಾಳಿಗೆ ಇಬ್ಬರು ಬಲಿ*: *ಕೊನೆಗೂ ಎಚ್ಚೆತ್ತ ಸರ್ಕಾರ, 10 ಆನೆಗಳ ಸೆರೆಗೆ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಎರಡು ದಿನಗಳ ಅಂತರದಲ್ಲಿ ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಸರಣಿ ಸಾವುಗಳಿಂದ ಜನರ ಆಕ್ರೋಶ ಹೆಚ್ಚಾಗಿದ್ದು, ಪ್ರತಿಭಟನೆ ಹಾಗೂ ರಸ್ತೆ ತಡೆಗೂ ಇಳಿದಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಜನರಲ್ಲಿ ಭೀತಿ ಮೂಡಿಸಿರುವ 10 ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಲು ಆದೇಶ ನೀಡಿದೆ.
ಬೇಲೂರು ತಾಲೂಕಿನ ಚೌಡನಹಳ್ಳಿಯಲ್ಲಿ ಶನಿವಾರ ಜಯಮ್ಮ ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದರ ಬೆನ್ನಲ್ಲೇ ನಾಗೇನಹಳ್ಳಿ ಗ್ರಾಮದಲ್ಲಿ ಹಫೀಝುರ್ ರೆಹಮಾನ್ ಕೂಡ ಆನೆ ದಾಳಿಯಿಂದ ಮೃತಪಟ್ಟಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಪ್ರಧಾನ ಮುಖ್ಯ ವನ್ಯಜೀವಿ ಸಂರಕ್ಷಣಾಧಿಕಾರಿ ಮಹತ್ವದ ಸೂಚನೆ ನೀಡಿದ್ದಾರೆ.
ಹಾಸನ ವಿಭಾಗದಲ್ಲಿ ಮಾನವ-ಆನೆ ಸಂಘರ್ಷಕ್ಕೆ ಕಾರಣವಾಗಿರುವ 10 ಗಂಡು ಕಾಡಾನೆಗಳನ್ನು ಗುರುತಿಸಿ ಸೆರೆಹಿಡಿಯಲು ಆದೇಶಿಸಲಾಗಿದೆ. ಅವುಗಳಿಂದ ಮತ್ತಷ್ಟು ಪ್ರಾಣಹಾನಿ ಹಾಗೂ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ವನ್ಯಜೀವಿ (ರಕ್ಷಣಾ) ಕಾಯ್ದೆ, 1972ರ ಸೆಕ್ಷನ್ 11(1)(ಎ) ಅಡಿಯಲ್ಲಿ ಆನೆಗಳನ್ನು ಸೆರೆಹಿಡಿಯಲು ಅನುಮತಿ ನೀಡಲಾಗಿದೆ. ಸೆರೆಹಿಡಿದ ಬಳಿಕ ಅವುಗಳ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಸೂಕ್ತ ಆವಾಸಸ್ಥಾನ ಹೊಂದಿರುವ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ.
ಈ ಕಾರ್ಯಾಚರಣೆಗೆ ಪುನರ್ ರಚಿಸಲಾಗಿರುವ ಸಾಕಾನೆ ತಂಡದ ಎ ಮತ್ತು ಸಿ ತಂಡಗಳ ಕುಮ್ಕಿ ಆನೆಗಳನ್ನು ಬಳಸಿಕೊಳ್ಳುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.
ಇನ್ನೊಂದೆಡೆ, ಹಾಸನದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವ ಆತಂಕದ ನಡುವೆಯೇ ಹಾಸನ-ಚಿಕ್ಕಮಗಳೂರು ಗಡಿ ಭಾಗದಲ್ಲಿ 53 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮಕ್ಕೆ ಸಮೀಪದಲ್ಲೇ ಗಜಪಡೆ ಪ್ರತ್ಯಕ್ಷವಾಗಿದೆ. ಯಾವುದೇ ಕ್ಷಣದಲ್ಲಿ ಆನೆಗಳು ಗ್ರಾಮ ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಕಾಫಿ ತೋಟದ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯನ್ನೂ ಸ್ಥಳದಲ್ಲಿ ನಿಯೋಜಿಸಲಾಗಿದೆ.




