Kannada NewsKarnataka NewsLatestNational

*100 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್*: *ಐವರ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: 30ರಿಂದ 35 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಸೇತುವೆಯಿಂದ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಜಖಂಗೊಂಡಿದ್ದು, ಐವರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಉತ್ತರಾಖಂಡದಲ್ಲಿ ರಿಷಿಕೇಶದಿಂದ ಶ್ರೀನಗರದ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ರಿಷಿಕೇಶ-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿಯ ಗುಲಾರ್ ಬಜಾರ್ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಸೇತುವೆಯ ಕೆಳಗೆ ಸುಮಾರು 100 ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬ್ಯಾಸಿ ಮತ್ತು ಧಲ್ವಾಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ ಎಸ್‌ಡಿಆರ್‌ಎಫ್ ತಂಡಗಳು ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 20 ಗಾಯಾಳುಗಳನ್ನು ರಕ್ಷಿಸಿ ಆಂಬ್ಯುಲೆನ್ಸ್‌ಗಳ ಮೂಲಕ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಆರ್‌ಎಫ್ ಕಮಾಂಡೆಂಟ್ ಅರ್ಪಣ್ ಯದುವಂಶಿ ಅವರ ಸೂಚನೆಯಂತೆ ಹೆಚ್ಚುವರಿ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಕಂದಕದ ಆಳ ಮತ್ತು ಗುಡ್ಡಗಾಡು ಪ್ರದೇಶದ ಕಾರಣ ರಕ್ಷಣಾ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗೆ ಸವಾಲು ಎದುರಾಗಿದೆ.

ಪೊಲೀಸರು, ಎಸ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಸ್ಥಳೀಯ ರಕ್ಷಣಾ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸಲಾಗುತ್ತಿದೆ. ಬಸ್ ಕಂದಕಕ್ಕೆ ಉರುಳಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಥವಾ ತಾಂತ್ರಿಕ ದೋಷವೇ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Related Articles

Back to top button