
ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನೇಮಕಾತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ. ನಾಮನಿರ್ದೇಶನದ ಮೂಲಕ ಸದಸ್ಯರು ಮತ್ತು ನಿರ್ದೇಶಕರಾಗಿ ನೇಮಕಗೊಂಡು ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿರುವವರನ್ನು ಸೇವೆಯಿಂದ ಬಿಡುಗಡೆಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಸೋಮವಾರ ಈ ಕುರಿತು ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
ನಿಗಮ ಮಂಡಳಿಯಲ್ಲಿ ಈಗಾಗಲೇ ಎರಡು ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಎಲ್ಲ ಸದಸ್ಯರು ಮತ್ತು ನಿರ್ದೇಶಕರನ್ನು ತಕ್ಷಣದಿಂದಲೇ ಪದಮುಕ್ತಗೊಳಿಸಿ, ಈ ಸಂಬಂಧ ಸೂಕ್ತ ಆದೇಶ ಹೊರಡಿಸುವಂತೆ ಸೂಚಿಸಲಾಗಿದೆ.
ಆದರೆ ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ಸ್ಥಳೀಯ ಯೋಜನಾ ಪ್ರಾಧಿಕಾರಗಳಿಗೆ ಈ ಆದೇಶದಿಂದ ವಿನಾಯಿತಿ ನೀಡಲಾಗಿದೆ. ಈ ಎರಡು ವರ್ಗಗಳನ್ನು ಹೊರತುಪಡಿಸಿ ಉಳಿದ ಎಲ್ಲ ನಿಗಮ ಮತ್ತು ಮಂಡಳಿಗಳಿಗೆ ಸೂಚನೆ ಅನ್ವಯವಾಗಲಿದೆ.
ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ವಿವಿಧ ನಿಗಮ ಮತ್ತು ಮಂಡಳಿಗಳಿಗೆ ನೂತನ ಸದಸ್ಯರು ಹಾಗೂ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಎರಡು ವರ್ಷ ಅಧಿಕಾರಾವಧಿ ಪೂರ್ಣಗೊಳಿಸಿರುವ ಹಳೆಯ ಸದಸ್ಯರನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.
ಹಳೆಯ ಸದಸ್ಯರನ್ನು ಪದಮುಕ್ತಗೊಳಿಸುವ ಪ್ರಕ್ರಿಯೆಯ ಜತೆಗೆ ಮುಖ್ಯಮಂತ್ರಿ ಅನುಮೋದಿಸಿರುವ ನೂತನ ಸದಸ್ಯರು ಮತ್ತು ನಿರ್ದೇಶಕರ ನೇಮಕಾತಿ ಪ್ರಕ್ರಿಯೆಯನ್ನೂ ತ್ವರಿತಗೊಳಿಸುವಂತೆ ಸೂಚಿಸಲಾಗಿದೆ.
ಪ್ರಮುಖ ಅಂಶವೆಂದರೆ ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ಸ್ಥಳೀಯ ಯೋಜನಾ ಪ್ರಾಧಿಕಾರಗಳಿಗೆ ಈ ಸೂಚನೆಯಿಂದ ವಿನಾಯಿತಿ ನೀಡಲಾಗಿದೆ. ಉಳಿದ ನಿಗಮ ಮತ್ತು ಮಂಡಳಿಗಳಲ್ಲಿ ಎರಡು ವರ್ಷ ಸೇವೆ ಪೂರ್ಣಗೊಳಿಸಿದ ನಾಮನಿರ್ದೇಶಿತ ಸದಸ್ಯರು ಹಾಗೂ ನಿರ್ದೇಶಕರನ್ನು ಬಿಡುಗಡೆಗೊಳಿಸುವಂತೆ ಸೂಚಿಸಲಾಗಿದೆ.



