Film & EntertainmentKannada NewsKarnataka NewsLatest

*ನಟ ಧನ್ವೀರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್*: *ವಿಜಯಲಕ್ಷ್ಮಿ ದಾಖಲಿಸಿದ್ದ 3 FIRಗಳ ತನಿಖೆಗೆ ತಡೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ಇದೀಗ ದರ್ಶನ್ ಆಪ್ತ ಎಂದೇ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡಗೆ ನ್ಯಾಯಾಲಯದಿಂದ ಮಹತ್ವದ ರಿಲೀಫ್ ಸಿಕ್ಕಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನೀಡಿದ್ದ ದೂರುಗಳ ಆಧಾರದಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್‌ಗಳ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ನಿಂದನೆ ಆರೋಪ ಮಾಡಿ ಮೂರು ಕಡೆಗಳಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜಾಜಿನಗರ, ಬಸವೇಶ್ವರನಗರ ಮತ್ತು ಚಾಮರಾಜಪೇಟೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರೂ, ಧನ್ವೀರ್ ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿ ಅನಂತ್ ರಮಾನಾಥ್ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಧನ್ವೀರ್ ಪರ ಹಿರಿಯ ವಕೀಲ ಫಣೀಂದ್ರ ವಾದ ಮಂಡಿಸಿ, ದೂರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪವಿದೆಯೇ ಹೊರತು, ನಿರ್ದಿಷ್ಟವಾಗಿ ಯಾವ ಮಹಿಳೆಯನ್ನು ನಿಂದಿಸಲಾಗಿದೆ ಎಂಬುದನ್ನು ಉಲ್ಲೇಖಿಸಿಲ್ಲ ಎಂದು ತಿಳಿಸಿದರು.

ಅಲ್ಲದೆ, ಅವಾಚ್ಯ ಶಬ್ದಗಳ ಬಳಕೆಯಿಂದ ಸಾರ್ವಜನಿಕ ಶಾಂತಿಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ವಾದಿಸಿದ ಅವರು, ಪ್ರಕರಣಗಳ ತನಿಖೆಗೆ ತಡೆ ನೀಡುವಂತೆ ನ್ಯಾಯಾಲಯವನ್ನು ಕೋರಿದರು. ಇದಕ್ಕೆ ಪ್ರತಿವಾದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿ, ತಡೆ ನೀಡದಂತೆ ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಗಳು ರಾಜಾಜಿನಗರ ಮತ್ತು ಬಸವೇಶ್ವರನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದರು. ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆಯನ್ನೂ ಮುಂದುವರಿಸಲು ಆದೇಶಿಸಿದರು.

ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ಆಡಿಯೋ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚಿಸಲಾಗಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಲಾಗಿದೆ.

Related Articles

Back to top button