*ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಬಿಗ್ ಶಾಕ್*: *ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಹಾಗೂ ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಯಾರ್ಯಾರ ಮನೆ ಮೇಲೆ ದಾಳಿ?
ಹಾಸನದ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಚಿತ್ರದುರ್ಗದ ಸಶಸ್ತ್ರರಕ್ಷಕ ದಳದ ರವೀಂದ್ರ, ತುಮಕೂರಿನ ತೂಕ ಮತ್ತು ಅಳತೆ ಇಲಾಖೆಯ ಇನ್ಸ್ಪೆಕ್ಟರ್, ಬಾಗಲಕೋಟೆಯ ಪಂಚಾಯಿತಿ ಅಧಿಕಾರಿ ಸಂಜೀವ ಹಿಪ್ಪರಗಿ ಸೇರಿದಂತೆ ಹಲವು ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ.
ಆಸ್ತಿ-ಪಾಸ್ತಿ ದಾಖಲೆಗಳ ಪರಿಶೀಲನೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ ನಡೆಸಿವೆ. ಏಕಕಾಲಕ್ಕೆ ಹಲವು ಕಡೆಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಆಸ್ತಿ-ಪಾಸ್ತಿಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಇತರೆ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.
ಹಾಸನ, ಚಿತ್ರದುರ್ಗ, ಹುಬ್ಬಳ್ಳಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಕಾರ್ಯಾಚರಣೆ ಮುಂದುವರಿದಿದೆ. ದಾಳಿ ವೇಳೆ ಪತ್ತೆಯಾಗುವ ಸ್ಥಿರಾಸ್ತಿ, ನಗದು, ಚಿನ್ನಾಭರಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಲೋಕಾಯುಕ್ತರ ಈ ದಿಢೀರ್ ಕಾರ್ಯಾಚರಣೆಯಿಂದ ಸರ್ಕಾರಿ ಅಧಿಕಾರಿಗಳ ವಲಯದಲ್ಲಿ ಆತಂಕ ಸೃಷ್ಟಿಯಾಗಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಅಕ್ರಮ ಆಸ್ತಿ ಕುರಿತ ಸಂಪೂರ್ಣ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.




