*‘ಬಸವ ಮಂಟಪ’ ಪುಸ್ತಕ ವಿವಾದ*: *ಸ್ವಯಂಪ್ರೇರಿತ ದೂರು ದಾಖಲಿಸಲು ಸಚಿವ ಸಂಪುಟ ನಿರ್ಧಾರ*

ಪ್ರಗತಿವಾಹಿನಿ ಸುದ್ದಿ: ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಅಂಶಗಳಿವೆ ಎಂಬ ಆರೋಪ ಕೇಳಿಬಂದಿರುವ ಸಂಶೋಧಕ ರವಿ ಹಂಜ್ ಅವರ ‘ಬಸವ ಮಂಟಪ’ ಪುಸ್ತಕದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ವಿವಾದ ಇದೀಗ ಸರ್ಕಾರದ ಮಟ್ಟದಲ್ಲೂ ಗಂಭೀರ ಚರ್ಚೆಗೆ ಗ್ರಾಸವಾಗಿದ್ದು, ಪುಸ್ತಕದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಬಸವಣ್ಣನವರ ತತ್ವ, ಸಿದ್ಧಾಂತ ಹಾಗೂ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಬರಹಗಳಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ವಿವಾದಿತ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಭೆಯಲ್ಲಿ ಹಲವು ಸಚಿವರು ಒತ್ತಾಯಿಸಿದರು. ಅಲ್ಲದೆ, ಈ ಸಂಬಂಧ ಸ್ವಯಂಪ್ರೇರಿತ ದೂರು (ಸೂಮೋಟೋ) ದಾಖಲಿಸಿ, ಕಾನೂನು ಪ್ರಕಾರ ಕ್ರಮ ಜರುಗಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಲಿಂಗಾಯತ ಸಮುದಾಯದಿಂದ ತೀವ್ರ ವಿರೋಧ
ಸುಮಾರು 600 ಪುಟಗಳ ಈ ಕೃತಿಯಲ್ಲಿನ ಕೆಲವು ವಿಚಾರಗಳು ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿವೆ. ಮಠಾಧೀಶರು, ಸಮುದಾಯದ ಮುಖಂಡರು, ಸಾಹಿತಿಗಳು ಸೇರಿದಂತೆ ಹಲವು ಗಣ್ಯರು ಪುಸ್ತಕದ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಬಸವಣ್ಣನವರ ವ್ಯಕ್ತಿತ್ವ ಹಾಗೂ ತತ್ವಾದರ್ಶಗಳನ್ನು ಅವಮಾನಿಸುವ ಬರಹಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮುಖಂಡರು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸುವ ನಿರ್ಧಾರ ಕೈಗೊಂಡಿರುವುದು ಪುಸ್ತಕ ವಿವಾದಕ್ಕೆ ಹೊಸ ತಿರುವು ನೀಡಿದೆ. ಸರ್ಕಾರದ ಮುಂದಿನ ಕಾನೂನು ಕ್ರಮಗಳ ಕುರಿತು ಇದೀಗ ಕುತೂಹಲ ಮೂಡಿದೆ.



