*ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಪತ್ನಿ ಪ್ರಮೀಳಾ ನಿಧನ*: *ಕುಟುಂಬದಲ್ಲಿ ಮಡುಗಟ್ಟಿದ ಶೋಕ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಅವರ ಪತ್ನಿ ಪ್ರಮೀಳಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಮೀಳಾ ಅವರು ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಪ್ರಮೀಳಾ ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಆಪ್ತರಲ್ಲಿ ಶೋಕ ಮಡುಗಟ್ಟಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೀಗರಾಗಿರುವ ತಮ್ಮಣ್ಣ ಅವರ ಕುಟುಂಬಕ್ಕೆ ಜೆಡಿಎಸ್ ನಾಯಕರು, ಗಣ್ಯರು ಹಾಗೂ ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
ಇಂದು (ನವೆಂಬರ್ 20) ಬೆಳಗ್ಗೆ ಬೆಂಗಳೂರಿನ ವಿಜಯನಗರದಲ್ಲಿರುವ ನಿವಾಸದಲ್ಲಿ ಪ್ರಮೀಳಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರು ಹಾಗೂ ಆಪ್ತರ ಅಂತಿಮ ದರ್ಶನಕ್ಕಾಗಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.
ಬಳಿಕ ಸಂಜೆ 4 ಗಂಟೆಗೆ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸ್ವಗ್ರಾಮ ದೊಡ್ಡರಸಿನಕೆರೆಗೆ ತರಲಾಗುತ್ತದೆ. ಶನಿವಾರ ಬೆಳಗ್ಗೆ 11 ಗಂಟೆಯವರೆಗೆ ಗ್ರಾಮಸ್ಥರು, ಸಂಬಂಧಿಕರು ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.
ಅಂತಿಮ ದರ್ಶನದ ಬಳಿಕ ಕುಟುಂಬದ ಸಂಪ್ರದಾಯದಂತೆ ದೊಡ್ಡರಸಿನಕೆರೆ ಗ್ರಾಮದಲ್ಲಿಯೇ ಅಂತ್ಯಕ್ರಿಯೆಯ ವಿಧಿವಿಧಾನಗಳು ನೆರವೇರಲಿವೆ ಎಂದು ಕುಟುಂಬ ಮೂಲಗಳು ತಿಳಿಸಿವೆ.




