*ಬೆಳಗಾವಿಯಲ್ಲಿ ಕಳ್ಳತನ*: *ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿ ಪರಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಯವರು ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಬೈಲಹೊಂಗಲ ನಗರದ ವಿನಾಯಕ ನಗರದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ವಿನಾಯಕ ನಗರದ ನಿವಾಸಿ ಯಲ್ಲಾಲಿಂಗ ತೊಕಲವರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮೂಲತಃ ಗೋಕಾಕ ತಾಲೂಕಿನ ಶಿಲತಿಬಾವಿ ಗ್ರಾಮದವರಾದ ಯಲ್ಲಾಲಿಂಗ ಅವರು ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿರುವುದನ್ನು ಗಮನಿಸಿದ ಕಳ್ಳರು ಬೀಗ ಮುರಿದು ಒಳನುಗ್ಗಿದ್ದಾರೆ ಎನ್ನಲಾಗಿದೆ.
ಮನೆಯಲ್ಲಿದ್ದ ಸುಮಾರು 23 ತೊಲಿ ಬಂಗಾರದ ಆಭರಣ, 14 ತೊಲಿ ಬೆಳ್ಳಿ ಆಭರಣ ಹಾಗೂ ₹1.20 ಲಕ್ಷ ನಗದು ಹಣವನ್ನು ಕಳ್ಳರು ದೋಚಿದ್ದಾರೆ. ಕಳವಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹35 ಲಕ್ಷ ಎಂದು ಅಂದಾಜಿಸಲಾಗಿದೆ.
ಇನ್ನು ಮುರಗೋಡ ರಸ್ತೆಯ ಬಸವನಗರದಲ್ಲಿಯೂ ಬೀಗ ಹಾಕಿದ್ದ ಎರಡು ಮನೆಗಳನ್ನು ಗುರಿಯಾಗಿಸಿಕೊಂಡ ಕಳ್ಳರು ಕಳ್ಳತನಕ್ಕೆ ಯತ್ನಿಸಿದ್ದಾರೆ. ಆದರೆ, ಯಾವುದೇ ಬೆಲೆಬಾಳುವ ವಸ್ತುಗಳು ಸಿಗದ ಕಾರಣ ಬರಿಗೈಯಲ್ಲಿ ವಾಪಸ್ಸಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ, ಸಿಪಿಐ ಪ್ರಮೋದ ಯಲಿಗಾರ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಮತ್ತು ಶ್ವಾನದಳದ ಸಿಬ್ಬಂದಿ ಕೂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದರು.
ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಾಡಹಗಲೇ ನಡೆದಿರುವ ಸರಣಿ ಕಳ್ಳತನದ ಯತ್ನ ಸೇರಿದಂತೆ ಘಟನೆಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.



