*ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ*: *ಪ್ರೀತಿಯ ವಿಚಾರಕ್ಕೆ ಕುಟುಂಬಸ್ಥರಿಂದಲೇ ಕೃತ್ಯ?*

ಪ್ರಗತಿವಾಹಿನಿ ಸುದ್ದಿ: ಹಾಡಹಗಲೇ ಕಾಲೇಜು ಆವರಣದಿಂದಲೇ ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳನ್ನು ಹಲವು ವ್ಯಕ್ತಿಗಳು ಬಲವಂತವಾಗಿ ಎಳೆದೊಯ್ದಿರುವ ಆಘಾತಕಾರಿ ಘಟನೆ ನಡೆದಿದೆ. ಈ ಕೃತ್ಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ.
ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ ಹಿಂದೂ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆಕೆಯ ಕುಟುಂಬಸ್ಥರೇ ಕಾಲೇಜಿಗೆ ಬಂದು ಬಲವಂತವಾಗಿ ಕರೆದೊಯ್ದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹಲವು ವ್ಯಕ್ತಿಗಳು ಸೇರಿ ವಿದ್ಯಾರ್ಥಿನಿಯನ್ನು ಎಳೆದು ಥಾರ್ ವಾಹನಕ್ಕೆ ಹತ್ತಿಸಿಕೊಂಡು ಹೋಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.
ನಗರದ ಖಾಸಗಿ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯ ಅಪಹರಣದ ಆರೋಪದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಹಾಗೂ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಸಂಬಂಧಪಟ್ಟ ಯುವತಿ ಕಾನೂನುಬದ್ಧವಾಗಿ ವಯಸ್ಕಳಾಗಿರುವುದರಿಂದ, ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಹಕ್ಕು ಆಕೆಗೆ ಇದೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಕರೆದೊಯ್ಯುವುದು ಅಪರಾಧವಾಗುತ್ತದೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಘಟನೆ ನಡೆದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರೆ, ವಾಹನ ಹೆಚ್ಚು ದೂರ ಹೋಗುವ ಮೊದಲೇ ತಡೆಯಲು ಸಾಧ್ಯವಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.




