ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ವಿಚಾರ ಉಭಯ ಸದನಗಳಲ್ಲಿ ವಿಪಕ್ಷ ಹಾಗೂ ಆಡಳಿತ ಪಕ್ಷಗಳ ನಡುವಿನ ಗದ್ದಲಕ್ಕೆ ಕಾರಣವಾಗಿದ್ದು, ಯತ್ನಾಳ್ ಕ್ಷಮೆಯಾಚನೆಗೆ ಕಾಂಗ್ರೆಸ್ ಸದಸ್ಯರು ಪಟ್ಟು ಹಿಡಿದಿದ್ದಾರೆ.
ಯತ್ನಾಳ್ ಹೇಳಿಕೆಗೆ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸಭೆ ಬಾವಿಗಿಳಿಸಿದು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ಸಿಎಂ ಯಡಿಯೂರಪ್ಪ ನಿರ್ಣಯ ಮಂಡಿಸುತ್ತಿದ್ದಂತೆಯೇ ಮಾಜಿ ಸಿಎಂ ಸಿದ್ದರಾಮಯ್ಯ , ಬಿಜೆಪಿ ಶಾಸಕ ಯತ್ನಾಳ್ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಈ ಮೂಲಕ ಅವರು ದೊರೆಸ್ವಾಮಿ ಮಾತ್ರವಲ್ಲ, ಇಡೀ ಸ್ವಾತಂತ್ರ್ಯ ಹೋರಾಟದ ಚಳುವಳಿಯನ್ನೇ ಅವಹೇಳನ ಮಾಡಿದ್ದಾರೆ ಎಂದರು. ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಯತ್ನಾಳ್ ರಾಜೀನಾಮೆಗೆ ಆಗ್ರಹಿಸಿದರು.
ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲವುಂಟಾಯಿತು. ಸಿದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಈ ನಡುವೆ ವಿಧಾನ ಪರಿಷತ್ ಕಲಾಪದ ವೆಳೆಯೂ ಕಾಂಗ್ರೆಸ್ ಸದಸ್ಯರು ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟಿಸಿದರು. ಉಭಯ ಸದನದಲ್ಲಿ ತೀವ್ರ ಗದ್ದಲ ಕೋಲಾಹಲ ಆರಂಭವಾದ ಹಿನ್ನಲೆಯಲ್ಲಿ ಎರಡೂ ಸದನಗಳ ಕಲಾಪಾವನ್ನು ಮುಂದೂಡಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ