*ಶಿಕ್ಷಕ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್*: *17 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಪ್ರಮಾಣದ ಶಿಕ್ಷಕರ ನೇಮಕಾತಿ ಆರಂಭವಾಗಿದೆ. ರಾಜ್ಯದಲ್ಲಿ ಸುಮಾರು 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ,ಮಾತನಾಡಿದ ಸಚಿವರು, ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ತಲವಾಟ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಿರ್ಮಿಸಿರುವ ವಸತಿ ಶಾಲೆಯ ಹೆಚ್ಚುವರಿ ಕಟ್ಟಡವನ್ನು ಉದ್ಘಾಟಿಸಿದ ಸಚಿವರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು.
ಶಿಕ್ಷಣ ಪ್ರತಿಯೊಬ್ಬರಿಗೂ ಉಚಿತವಾಗಿ ದೊರೆಯಬೇಕು. ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಲಭ್ಯವಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಮಕ್ಕಳ ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ನಾನು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.
ನಂತರ ಗೌತಮಪುರ ಮತ್ತು ಹೊಸಬಾಳೆ ಗ್ರಾಮಗಳನ್ನು ಸಂಪರ್ಕಿಸುವ ಹೊಂಕೇರಿ ಗ್ರಾಮದ ಸಮೀಪ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿಯನ್ನು ಸಚಿವರು ಪರಿಶೀಲಿಸಿದರು. ಅಂದಾಜು ₹1.40 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದು, ಸ್ಥಳೀಯ ಜನರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.
ತಾಳಗುಪ್ಪ ಹೋಬಳಿಯ ತಲವಾಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜಿನಕಾನು ಗ್ರಾಮದಿಂದ ಹಿರೇಮನಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಸಚಿವರು ಭೂಮಿಪೂಜೆ ನೆರವೇರಿಸಿದರು. ₹25 ಲಕ್ಷ ಅಂದಾಜು ವೆಚ್ಚದಲ್ಲಿ ಈ ರಸ್ತೆ ನಿರ್ಮಾಣವಾಗಲಿದೆ ಎಂದರು.




