*ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಚರ್ಚೆಗೆ ಆದ್ಯತೆ*: *ಸಭಾಪತಿ ಸಲೀಂ ಅಹಮ್ಮದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 2ರಿಂದ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಲು ಆದ್ಯತೆ ನೀಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದರು.
ಬೆಳಗಾವಿಯಲ್ಲಿ ವಿಧಾನಸಭೆ ಸ್ಪೀಕರ್ ಜಿ.ಎಸ್. ಪಾಟೀಲ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನ ಯಶಸ್ವಿಯಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯಲು ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರು ಸಹಕರಿಸಬೇಕು. ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರಗಳು ಸದನದಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಬೇಕು. ರಾಜ್ಯದ ವಿವಿಧ ಸಮಸ್ಯೆಗಳಿಗೆ ಚರ್ಚೆಯ ಮೂಲಕ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಬೇಕು ಎಂದು ಹೇಳಿದರು.
ಅಧಿವೇಶನದ ಪೂರ್ವಸಿದ್ಧತೆಗಳ ಕುರಿತು ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ವಿವಿಧ ಸಂಘಟನೆಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಸುವುದು ಸಹಜ. ಅವರ ಸಮಸ್ಯೆಗಳು ಮತ್ತು ಬೇಡಿಕೆಗಳಿಗೆ ಸ್ಪಂದಿಸುವ ಕೆಲಸವೂ ಆಗಬೇಕು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣಕ್ಕೆ ಚಿಂತನೆ
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಅಧಿವೇಶನದ ಆರಂಭದಲ್ಲೇ ಚರ್ಚೆ ನಡೆಯಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸ್ಪೀಕರ್ ಹಾಗೂ ಸಭಾಪತಿ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಇದೇ ವೇಳೆ ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಿಸುವ ಚಿಂತನೆ ಇದೆ. ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಈ ಹಿಂದೆ ಈ ಸಂಬಂಧ ಯಾವ ಹಂತದ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ಇಲ್ಲ. ಆದರೆ ಶಾಸಕರ ಭವನ ನಿರ್ಮಾಣದ ಬಗ್ಗೆ ಆಶಾವಾದ ಹೊಂದಿದ್ದೇವೆ ಎಂದು ತಿಳಿಸಿದರು.
ಶಾಸಕರ ಭವನ ನಿರ್ಮಾಣದ ಜವಾಬ್ದಾರಿಯನ್ನು ಖಾಸಗಿಯವರಿಗೆ ವಹಿಸುವುದಿಲ್ಲ. ಸರ್ಕಾರವೇ ಸ್ವಂತವಾಗಿ ಶಾಸಕರ ಭವನ ನಿರ್ಮಿಸಲಿದೆ ಎಂದು ಸ್ಪಷ್ಟಪಡಿಸಿದರು.



