Kannada NewsKarnataka NewsLatest

*ಇನ್ಮುಂದೆ ಅಂಗಡಿಗಳು, ಹೋಟೆಲ್ ಗಳಲ್ಲಿ ಈ ಬೋರ್ಡ್ ಕಡ್ದಾಯ*: *ನಿಯಮ ಉಲ್ಲಂಘಿಸಿದ್ರೆ ಲೈಸೆನ್ಸ್ ರದ್ದು*

ಪ್ರಗತಿವಾಹಿನಿ ಸುದ್ದಿ: ಜಿಲ್ಲೆಯಲ್ಲಿರುವ ಅಂಗಡಿ, ಹೋಟೆಲ್ ಗಳಿಗೆ ದಕ್ಷಿಣ ಕನ್ನಡ ಜಿಲ್ಲಾಡಲಿತ ಮಹತ್ವದ ಆಸೇಶ ಹೊರಡಿಸಿದೆ. ನಿಯಮ ಉಲ್ಲಂಘನೆ ಮಾಡಿದರೆ ಅಂಗಡಿ ಹೋಟೆಲ್ ಗಳ ಪರವಾನಗಿ ರದ್ದುಗೊಳಿಸುವುದಾಗಿ ಖಡಕ್ ಎಚ್ಚರಿಕೆ ನೀಡಿದೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವಜನತೆ ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವ ಆತಂಕದ ನಡುವೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಹತ್ವದ ಕ್ರಮಕ್ಕೆ ಮುಂದಾಗಿದೆ.

ಜಿಲ್ಲೆಯಲ್ಲಿ ಬಿಡಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಇನ್ಮುಂದೆ ಅಂಗಡಿ, ಹೋಟೆಲ್‌ಗಳಿಗೆ ಹೊಸದಾಗಿ ವ್ಯಾಪಾರ ಪರವಾನಗಿ ನೀಡುವಾಗ ಅಥವಾ ನವೀಕರಿಸುವಾಗ ‘ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಬಿಡಿಯಾಗಿ ಮಾರಾಟ ಮಾಡುವಂತಿಲ್ಲ’ ಎಂಬ ಎಚ್ಚರಿಕೆ ಸಂದೇಶ ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ಪರವಾನಗಿಯನ್ನೇ ರದ್ದುಗೊಳಿಸುವ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಈ ಮಹತ್ವದ ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹೊಸದಾಗಿ ವ್ಯಾಪಾರ ಪರವಾನಗಿ ನೀಡುವಾಗ ಮತ್ತು ನವೀಕರಿಸುವಾಗ ಈ ಷರತ್ತನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶಿಸಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹೋಟೆಲ್‌ಗಳು, ಕೆಫೆಗಳು ಹಾಗೂ ಬಿಡಿಯಾಗಿ ಸಿಗರೇಟ್ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿ ನಡೆಸಬೇಕು. ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ವ್ಯಾಪಾರ ಪರವಾನಗಿ ರದ್ದುಗೊಳಿಸುವಂತಹ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಅಂಗಡಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಅಪ್ರಾಪ್ತರಿಗೆ ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಯುವಜನತೆ ವ್ಯಸನಗಳಿಗೆ ಒಳಗಾಗುತ್ತಿರುವುದು ಕಳವಳಕಾರಿ ಸಂಗತಿ ಎಂದಿದ್ದಾರೆ.

ಶಾಲೆ ಮತ್ತು ಕಾಲೇಜುಗಳ 100 ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Related Articles

Back to top button