Film & EntertainmentKannada NewsKarnataka NewsLatest

*ದರ್ಶನ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಿಗುತ್ತಾ ಅನುಮತಿ?*: *ಕೋರ್ಟ್‌ನಿಂದ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಆರೋಗ್ಯದ ವಿಚಾರ ಮತ್ತೆ ನ್ಯಾಯಾಲಯದ ಮುಂದೆ ಬಂದಿದೆ. ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪದೊಂದಿಗೆ ದರ್ಶನ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೇಳಿದ್ದಾರೆ. ಆದರೆ ಈ ಮನವಿಗೆ ಸಂಬಂಧಿಸಿದ ವಿಚಾರಣೆ ಇದೀಗ ಮತ್ತೊಂದು ದಿನಕ್ಕೆ ಮುಂದೂಡಿಕೆಯಾಗಿದೆ.

ಜೈಲಿನ ಆಸ್ಪತ್ರೆಯಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಇದರಿಂದ ತಮ್ಮ ನೋವು ಕಡಿಮೆಯಾಗಿಲ್ಲ ಎಂದು ದರ್ಶನ್ ಅರ್ಜಿಯಲ್ಲಿ ತಿಳಿಸಿದ್ದಾರೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಜೈಲಿನ ಆಸ್ಪತ್ರೆಯಿಂದ ಹೊರಗಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿಶೇಷ ಸೌಲಭ್ಯಗಳಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇದು ಆರೋಗ್ಯಕ್ಕೆ ಸಂಬಂಧಿಸಿದ ವಿಚಾರವಾಗಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸುವಂತೆಯೂ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಪ್ರಸನ್ನಕುಮಾರ್, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಬುಧವಾರ ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬುಧವಾರಕ್ಕೆ ಮುಂದೂಡಿದೆ.

ಇನ್ನು ಅರ್ಜಿಯ ತುರ್ತು ವಿಚಾರಣೆಯ ಅಗತ್ಯದ ಕುರಿತು ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಮತ್ತು ಎಸ್‌ಪಿಪಿ ಪ್ರಸನ್ನಕುಮಾರ್ ನಡುವೆ ವಾಗ್ವಾದವೂ ನಡೆದಿದೆ. ಜೈಲಿನಲ್ಲಿ ಸರಿಯಾದ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳಿಂದ ವರದಿ ಪಡೆಯುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಅಲ್ಲದೆ, ಹಿರಿಯ ವೈದ್ಯಾಧಿಕಾರಿಗಳು ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುವಂತೆಯೂ ನಿರ್ದೇಶನ ನೀಡಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದ್ದು, ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.

Related Articles

Back to top button