*18 ವರ್ಷ ಜೈಲುವಾಸದ ಬಳಿಕ ಗೋಧ್ರಾ ಅಪರಾಧಿಗೆ ಸುಪ್ರೀಂ ಕೋರ್ಟ್ನಿಂದ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಗೋಧ್ರಾ ರೈಲು ದುರಂತದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿಯೊಬ್ಬನಿಗೆ ವೈದ್ಯಕೀಯ ಕಾರಣಗಳ ಆಧಾರದ ಮೇಲೆ ನ್ಯಾಯಾಲಯದಿಂದ ಮಧ್ಯಂತರ ಪರಿಹಾರ ಸಿಕ್ಕಿದೆ. 18 ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿರುವ ಆತನ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ನ್ಯಾಯಪೀಠ ಈ ನಿರ್ಧಾರ ಕೈಗೊಂಡಿದೆ.
2002ರ ಫೆಬ್ರವರಿಯಲ್ಲಿ ಸಾಬರಮತಿ ಎಕ್ಸ್ಪ್ರೆಸ್ ರೈಲಿನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಘಟನೆ ಗುಜರಾತ್ನಲ್ಲಿ ಭಾರೀ ಕೋಮು ಗಲಭೆಗಳಿಗೆ ಕಾರಣವಾಗಿತ್ತು. ಈ ಪ್ರಕರಣದಲ್ಲಿ ಅಪರಾಧಿ ಇರ್ಫಾನ್ ಸಿರಾಜ್ ಪಾಡಾ ಸೇರಿದಂತೆ ಹಲವು ಆರೋಪಿಗಳಿಗೆ ಸುದೀರ್ಘ ವಿಚಾರಣೆಯ ಬಳಿಕ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಬಂಧನವಾದಾಗಿನಿಂದ ಪಾಡಾ 18 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾರೆ.
ಪಾಡಾ ಅವರು ತೀವ್ರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನಿರಂತರ ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದೆ. ಈಗಾಗಲೇ 18 ವರ್ಷ 3 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವ ಅವರು, ಮುಖ್ಯ ಮೇಲ್ಮನವಿ ಅರ್ಜಿಯ ಅಂತಿಮ ವಿಚಾರಣೆ ಬಾಕಿ ಇರುವ ಹಿನ್ನೆಲೆಯಲ್ಲಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ಈ ವೇಳೆ ಗುಜರಾತ್ ಸರ್ಕಾರದ ಪರ ವಕೀಲರು, ಇದು ಅತ್ಯಂತ ಗಂಭೀರ ಅಪರಾಧ ಪ್ರಕರಣವಾಗಿದೆ. ಪಾಡಾ ರೈಲು ಬೋಗಿಯ ಮೇಲೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ್ದನು ಎಂದು ವಾದಿಸಿದರು. ಆದರೆ, ಹೃದಯ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವುದು ವೈದ್ಯಕೀಯ ವರದಿಗಳಿಂದ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಾನವೀಯ ಮತ್ತು ವೈದ್ಯಕೀಯ ಆಧಾರದ ಮೇಲೆ ಶಿಕ್ಷೆ ಅಮಾನತುಗೊಳಿಸಲು ಸರ್ಕಾರ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ತಿಳಿಸಿದರು.
ವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯ ವಿಧಿಸುವ ಕಠಿಣ ಷರತ್ತುಗಳಿಗೆ ಒಳಪಟ್ಟು ಪಾಡಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಸೂಚಿಸಿದೆ. ಆದರೆ, ಈ ಆದೇಶ ಪ್ರಕರಣದಿಂದ ಖುಲಾಸೆ ನೀಡಿರುವುದಲ್ಲ. ಶಿಕ್ಷೆಯ ವಿರುದ್ಧ ಸಲ್ಲಿಸಿರುವ ಮುಖ್ಯ ಮೇಲ್ಮನವಿಯ ಅಂತಿಮ ವಿಚಾರಣೆ ಇನ್ನೂ ಬಾಕಿಯಿದ್ದು, ಅದರ ತೀರ್ಪು ಬರುವವರೆಗೆ ಮಾತ್ರ ಈ ಮಧ್ಯಂತರ ಪರಿಹಾರ ಅನ್ವಯವಾಗಲಿದೆ.
ಇನ್ನು 2002ರ ಫೆಬ್ರವರಿ 27ರಂದು ಗೋಧ್ರಾ ರೈಲು ನಿಲ್ದಾಣದ ಬಳಿ ಸಾಬರಮತಿ ಎಕ್ಸ್ಪ್ರೆಸ್ನ ಎಸ್-6 ಬೋಗಿಗೆ ಬೆಂಕಿ ಹಚ್ಚಿದ ಪರಿಣಾಮ 59 ಮಂದಿ ಸಜೀವ ದಹನವಾಗಿದ್ದರು. ಈ ಪ್ರಕರಣದಲ್ಲಿ 2017ರಲ್ಲಿ ಗುಜರಾತ್ ಹೈಕೋರ್ಟ್ 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿತ್ತು. ಇನ್ನು 20 ಮಂದಿಯ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿತ್ತು. ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳು 2018ರಿಂದ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಉಳಿದಿವೆ.




