*ಪೋಕ್ಸೊ ಪ್ರಕರಣ*: *ಖ್ಯಾತ ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ರೂಪಾಯಿ ದಂಡ*

ಪ್ರಗತಿವಾಹಿನಿ ಸುದ್ದಿ: ಮಲಯಾಳಂ ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಖ್ಯಾತ ನಟನಿಗೆ ಇದೀಗ ಕಾನೂನು ಸಂಕಷ್ಟ ಎದುರಾಗಿದೆ. 2022ರಲ್ಲಿ ನಡೆದಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಅಪ್ರಾಪ್ತ ಮಕ್ಕಳ ಎದುರು ಅಸಭ್ಯವಾಗಿ ವರ್ತಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಟನಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.
ನಟ ಶ್ರೀಜಿತ್ ರವಿಗೆ ಕೇರಳದ ತ್ರಿಶೂರ್ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. ನ್ಯಾಯಾಧೀಶೆ ರಮ್ಯಾ ಮೆನನ್ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 509 ಹಾಗೂ ಪೋಕ್ಸೊ ಕಾಯ್ದೆಯಡಿ ಶ್ರೀಜಿತ್ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದೆ. ಒಂದು ವರ್ಷದ ಕಠಿಣ ಜೈಲು ಶಿಕ್ಷೆಯ ಜೊತೆಗೆ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ತೀರ್ಪಿನ ಬಳಿಕ ನಟನ ಪರ ವಕೀಲರು ಕೇರಳ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆಯನ್ನು ಒಂದು ತಿಂಗಳ ಕಾಲ ಅಮಾನತುಗೊಳಿಸಿದೆ. ಇಬ್ಬರು ಶ್ಯೂರಿಟಿಗಳು ಹಾಗೂ 50 ಸಾವಿರ ರೂಪಾಯಿ ಬಾಂಡ್ ಆಧಾರದ ಮೇಲೆ ಶ್ರೀಜಿತ್ ಅವರಿಗೆ ಜಾಮೀನು ನೀಡಲಾಗಿದೆ. ಡಿಸೆಂಬರ್ 23, 2026ರಂದು ಮತ್ತೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
2022ರ ಜುಲೈ 4ರಂದು ಶಾಲೆ ಮುಗಿಸಿ ಅಪಾರ್ಟ್‌ಮೆಂಟ್‌ಗೆ ಮರಳುತ್ತಿದ್ದ ಅಪ್ರಾಪ್ತ ಮಕ್ಕಳ ಎದುರು ನಟ ಅಸಭ್ಯವಾಗಿ ವರ್ತಿಸಿ ಬೆದರಿಕೆ ಹಾಕಿದ್ದ. ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಶ್ರೀಜಿತ್ ಈ ಹಿಂದೆ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಅವರ ಅರ್ಜಿಗಳನ್ನು ವಜಾಗೊಳಿಸಿದ್ದವು.
ಪ್ರಕರಣದ ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರವಾಗಿ 21 ಸಾಕ್ಷಿಗಳು ನಟನ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಇದೀಗ ನ್ಯಾಯಾಲಯ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿದೆ.
50 ವರ್ಷದ ಶ್ರೀಜಿತ್ ರವಿ, ಹಿರಿಯ ನಟ ಟಿ.ಜಿ. ರವಿ ಪುತ್ರ. 2005ರಿಂದ ಮಲಯಾಳಂ ಮತ್ತು ತಮಿಳು ಸಿನಿಮಾಗಳಲ್ಲಿ ಪೋಷಕ ಹಾಗೂ ಖಳನಾಯಕನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದಾರೆ.




