Belagavi NewsBelgaum NewsCrimeKannada NewsKarnataka News

*ಬೆಳಗಾವಿಯಲ್ಲಿ ಪೊಲೀಸರ ಕಾರ್ಯಾಚರಣೆ: ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಮಾದಕ ವಸ್ತು ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಹೆರಾಯಿನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, ಸುಮಾರು 72 ಸಾವಿರ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ನವೆಂಬರ್ 22ರಂದು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಕೆ. ಹೊಳೆನ್ನವರ ಅವರು ಸಿಬ್ಬಂದಿಯೊಂದಿಗೆ ಬಿಮ್ಸ್ ಆಸ್ಪತ್ರೆ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ದಾಳಿ ನಡೆಸಿದರು.

ಈ ವೇಳೆ ಉಜ್ವಲ್ ನಗರದ ನಿವಾಸಿ ಅಷ್ಟಲ್ ರಶೀದ ಬೇಪಾರಿ (41) ಎಂಬಾತ ತನ್ನ ಸ್ವಂತ ಲಾಭಕ್ಕಾಗಿ ಹೆರಾಯಿನ್ ಮಾದಕ ವಸ್ತುವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆತನಿಂದ 72 ಸಾವಿರ ರೂ. ಮೌಲ್ಯದ 3.60 ಗ್ರಾಂ ಹೆರಾಯಿನ್ ಜಪ್ತಿ ಮಾಡಲಾಗಿದೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 180/2026ರ ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 21(ಎ)ರಂತೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಮತ್ತೊಬ್ಬನ ವಿರುದ್ಧ ಪ್ರಕರಣ

ಇನ್ನೊಂದೆಡೆ, ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಉದ್ಯಮಬಾಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ನವೆಂಬರ್ 22ರಂದು ಇಂಡಸ್ಟ್ರಿಯಲ್ ಏರಿಯಾದ ಪರಾಠಾ ಕಾರ್ನರ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುತ್ತಿದ್ದ ಮಜಗಾಂವದ ಗಂಗಾಯಿ ಗಲ್ಲಿಯ ನಿವಾಸಿ ಪ್ರಶಾಂತ ದಶರಥ ಸುತಾರ (29) ಎಂಬಾತನ ಮೇಲೆ ಎಎಸ್‌ಐ ಆರ್.ಎಫ್. ಘರಾಣೆ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ಸಂಬಂಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 97/2026ರ ಅಡಿಯಲ್ಲಿ ಅಬಕಾರಿ ಕಾಯ್ದೆಯ ಕಲಂ 15(ಎ) ಮತ್ತು 32(3)ರಂತೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ.

ಈ ಎರಡೂ ಕಾರ್ಯಾಚರಣೆಗಳಲ್ಲಿ ಪಾಲ್ಗೊಂಡ ಪಿಎಸ್‌ಐ, ಎಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿಗಳು ಶ್ಲಾಘಿಸಿದ್ದಾರೆ.

Related Articles

Back to top button