CrimeFilm & EntertainmentKarnataka NewsLatest

*ಮದುವೆ ಕಾರಣ ನೀಡಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ*

ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾಗೌಡ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ (A1) ಪವಿತ್ರಾ ಗೌಡ ಸಹೋದರನ ಮದುವೆ ಕಾರಣ ನೀಡಿ ಮತ್ತೊಮ್ಮೆ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ವಿವಾಹ ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ನೀಡುವಂತೆ ಕೋರಿ ಅವರು ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ಮುಂದೂಡಿದೆ.

ಪವಿತ್ರಾ ಗೌಡ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ, ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ (SPP) ಅರ್ಜಿಯ ಪ್ರತಿಯನ್ನು ಸಲ್ಲಿಸಲು ಕಾಲಾವಕಾಶ ನೀಡುವಂತೆ ಪವಿತ್ರಾ ಗೌಡ ಪರ ವಕೀಲರು ಪೀಠಕ್ಕೆ ಮನವಿ ಮಾಡಿದರು.

ಈ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್, ಅರ್ಜಿಯ ಪ್ರತಿ ಹಾಗೂ ನೋಟಿಸ್ ಪಡೆದುಕೊಳ್ಳುವಂತೆ ಎಸ್‌ಪಿಪಿ ಅವರಿಗೆ ಸೂಚನೆ ನೀಡಿತು. ಅಲ್ಲದೆ, ಈ ಕುರಿತು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ ಮುಂದಿನ ವಿಚಾರಣೆಯನ್ನು ಡಿಸೆಂಬರ್ 4ಕ್ಕೆ ನಿಗದಿಪಡಿಸಿತು.

Related Articles

Back to top button