*ಡಿ. 3ರಂದು ಸರ್ಕಾರದ ವಿರುದ್ಧ ಹೋರಾಟ, ಸುವರ್ಣಸೌಧ ಮುತ್ತಿಗೆಗೆ ಸಿದ್ಧತೆ*: *ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ ಯೋಜನೆಗಳು, ರೈತರ ಸಮಸ್ಯೆಗಳು ಹಾಗೂ ಆಶಾ ಕಾರ್ಯಕರ್ತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಡಿಸೆಂಬರ್ 3ರಂದು ಬಿಜೆಪಿಯಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು. ಅಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಬೆಳಗಾವಿಯಲ್ಲಿ ಬಿಜೆಪಿ ಸಂಘಟನಾತ್ಮಕ ಸಭೆಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ ಹಾಗೂ ಬೆಳಗಾವಿ ನಗರ ಜಿಲ್ಲೆಗಳ ಸಂಘಟನಾತ್ಮಕ ಸಭೆ ನಡೆಸಲಾಗಿದೆ. ಡಿಸೆಂಬರ್ 3ರಂದು ನಡೆಯಲಿರುವ ಹೋರಾಟದಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಪಕ್ಷದ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಮಾಲಿನಿ ಸಿಟಿ ಪ್ರದೇಶದಲ್ಲಿ ಸ್ಥಳ ಪರಿಶೀಲಿಸಿ ಸುಮಾರು 10ರಿಂದ 15 ಸಾವಿರ ಜನರನ್ನು ಸೇರಿಸುವ ಉದ್ದೇಶವಿದೆ. ಬಳಿಕ ಸುವರ್ಣಸೌಧ ಮುತ್ತಿಗೆ ಹಾಕುವ ಕುರಿತು ತೀರ್ಮಾನಿಸಲಾಗುವುದು ಎಂದರು.
ಬರ ಪರಿಹಾರ, ಆಶಾ ಕಾರ್ಯಕರ್ತರ ಸಮಸ್ಯೆಗಳು, ನೀರಾವರಿ ಯೋಜನೆಗಳು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲಾಗುವುದು. ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿರುವುದರಿಂದ ಉತ್ತರ ಕರ್ನಾಟಕದ ಜನರ ಪರವಾಗಿ ಧ್ವನಿ ಎತ್ತಲು ಉತ್ತಮ ಅವಕಾಶ ಸಿಕ್ಕಿದೆ ಎಂದು ಹೇಳಿದರು.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಲಾಗಿತ್ತು. ಆದರೆ ಈಗಿನ ಸರ್ಕಾರ ಆ ಯೋಜನೆಗಳನ್ನು ಮುಂದುವರಿಸುವ ಕೆಲಸವನ್ನೂ ಮಾಡುತ್ತಿಲ್ಲ. ರಾಮಲಿಂಗೇಶ್ವರ ಏತ ನೀರಾವರಿ ಯೋಜನೆಗೆ ಸುಮಾರು 300 ಕೋಟಿ ರೂ. ವೆಚ್ಚ ಮಾಡಲಾಗಿದೆ. ಆದರೆ ಯೋಜನೆಯ ಎಂಟು ಮೋಟರ್ಗಳ ದುರಸ್ತಿಗೆ ಕೇವಲ 5 ಕೋಟಿ ರೂ. ಖರ್ಚು ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಟೀಕಿಸಿದರು.
ಕಳೆದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾತನಾಡಿದ್ದೆ. ಉತ್ತರ ಕರ್ನಾಟಕಕ್ಕೆ ಹತ್ತು ದಿನ ಬರಲು ಅಮೆರಿಕದ ವೀಸಾ ಪಡೆದುಕೊಂಡು ಬಂದಂತೆ ಮಾಡುತ್ತೀರಿ ಎಂದು ಅಂದು ಹೇಳಿದ್ದೆ. ಈ ಭಾಗದ ಅಭಿವೃದ್ಧಿ ಆಗಬೇಕಾದಷ್ಟು ಪ್ರಮಾಣದಲ್ಲಿ ಆಗಿಲ್ಲ. ಜನರಿಗೆ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಸಮರ್ಥನೀಯ ಎನಿಸುತ್ತಿದೆ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಮರ್ಪಕ ಚರ್ಚೆ ನಡೆಯದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಉತ್ತರ ಕರ್ನಾಟಕದ ವಿಚಾರ ಬಂದಾಗ ಮಾಜಿ ಸಚಿವ ಉಮೇಶ್ ಕತ್ತಿ ನೆನಪಾಗುತ್ತಾರೆ. ಅವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಬೇಕೆಂದು ಹೇಳುತ್ತಿದ್ದರು. ಅವರು ಹೇಳುತ್ತಿದ್ದ ವಿಚಾರದಲ್ಲಿ ಸತ್ಯವಿದೆ ಎಂದು ನಮಗೂ ಅನಿಸುತ್ತಿದೆ. ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು.
ಅಧಿವೇಶನದಲ್ಲಿ ರೈತರಿಗೆ ಪರಿಹಾರ ನೀಡುವಂತೆ ಸದನದ ಒಳಗೆ ಬಿಜೆಪಿ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರು ಹೋರಾಟ ನಡೆಸಲಿದ್ದಾರೆ. ಸದನದ ಹೊರಗೆ ಪಕ್ಷದ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು. ಮುಖ್ಯಮಂತ್ರಿ ಅವರೇ ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಂದ ಜನರು ಏನನ್ನು ನಿರೀಕ್ಷಿಸಲು ಸಾಧ್ಯ? ಆದರೂ ರೈತರು ಹಾಗೂ ಜನರಿಗೆ ಸಿಗಬೇಕಾದ ಪರಿಹಾರ ದೊರಕಿಸಲು ಬಿಜೆಪಿ ತನ್ನ ಕರ್ತವ್ಯವನ್ನು ಹೋರಾಟದ ಮೂಲಕ ನಿರ್ವಹಿಸಲಿದೆ ಎಂದರು.
ಕಬ್ಬು ಬೆಳೆಗಾರರ ಹೋರಾಟದ ವಿಚಾರ
ಕಬ್ಬು ಬೆಳೆಗಾರರ ಹೋರಾಟಕ್ಕೆ ಬೆಂಬಲ ನೀಡದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅರಭಾವಿ ಶಾಸಕನಾಗಿ ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೆ. ಸಕ್ಕರೆ ಕಾರ್ಖಾನೆಗಳು ಎಲ್ಲ ಪಕ್ಷಗಳ ನಾಯಕರಿಗೂ ಸೇರಿವೆ. ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದ್ದೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿಲ್ಲ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆಯುತ್ತೇವೆ
ಬಿಜೆಪಿ ನಾಯಕರ ನಡುವಿನ ಭಿನ್ನಾಭಿಪ್ರಾಯದ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಕೆಲಸ ಮಾಡುತ್ತೇವೆ. ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆ ಎಂದರು.
2028ರ ಎನ್ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಈಗ ಚರ್ಚೆ ಬೇಡ
2028ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಎಂಬ ಎಚ್.ಡಿ.ರೇವಣ್ಣ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಹೋರಾಟ ನಡೆಸುತ್ತಿವೆ. ಚುನಾವಣೆಯನ್ನೂ ಮೈತ್ರಿಯಾಗಿ ಎದುರಿಸಲಿದ್ದೇವೆ. ಆದರೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ನಮ್ಮ ಹಂತದಲ್ಲಿ ನಿರ್ಧರಿಸಲು ಸಾಧ್ಯವಿಲ್ಲ. ಅದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಸದ್ಯ ಈ ಕುರಿತು ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.



