*ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸುಪ್ರೀಂ ತಿರುವು*: *ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ!*

ಪ್ರಗತಿವಾಹಿನಿ ಸುದ್ದಿ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ್ದ ಆದೇಶವನ್ನೇ ರದ್ದುಪಡಿಸಿದ್ದು, ಇದೀಗ ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಗುರುನಾಥ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿ ಈ ಸೂಚನೆ ನೀಡಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾದ ಬಳಿಕವೂ ವಿನಯ್ ಕುಲಕರ್ಣಿ ಯೋಗೇಶ್ ಗೌಡ ಕೊಲೆ ಪ್ರಕರಣದ ಕಾರಣದಿಂದ ಬಹುತೇಕ ಸಮಯ ಜೈಲಿನಲ್ಲೇ ಕಳೆದಿದ್ದರು. ಈ ಹಿಂದೆ ಜಾಮೀನು ಹಾಗೂ ಪೆರೋಲ್ ಮೂಲಕ ಹೊರಬಂದಿದ್ದ ಅವರು, ಇದೀಗ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ.
ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್ಗೆ ಏಳು ವರ್ಷಗಳ ಶಿಕ್ಷೆ ಪ್ರಕಟಿಸಲಾಗಿತ್ತು.
ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರ ಅಪರಾಧ ನಿರ್ಣಯ ಮತ್ತು ಶಿಕ್ಷೆಗೆ ತಡೆ ನೀಡಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಈ ಆದೇಶವನ್ನು ಸಿಬಿಐ ಹಾಗೂ ಗುರುನಾಥ ಗೌಡ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ವಿಚಾರಣೆ ವೇಳೆ ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿದರು. ಗಂಭೀರ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆ ಅಮಾನತುಗೊಳಿಸುವಾಗ ಸುಪ್ರೀಂ ಕೋರ್ಟ್ನ ಹಿಂದಿನ ತೀರ್ಪುಗಳು ಮತ್ತು ಕಾನೂನು ತತ್ವಗಳನ್ನು ಪಾಲಿಸಬೇಕು. ವಿನಯ್ ಕುಲಕರ್ಣಿ ಅವರ ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ ಹೈಕೋರ್ಟ್ ಕ್ರಮ ಸರಿಯಲ್ಲ ಎಂದು ವಾದಿಸಿದರು.
ಇನ್ನೊಂದೆಡೆ ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ಎರಡೂ ಕಡೆಯ ವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಇದೀಗ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ಹಿನ್ನೆಲೆ 2016ರ ಜೂನ್ 15ರಂದು ಧಾರವಾಡದಲ್ಲಿ ಯೋಗೇಶ್ ಗೌಡ ಹತ್ಯೆಯಾಗಿತ್ತು. 2019ರಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. 2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿ ಬಂಧನವಾಗಿತ್ತು. 2021ರ ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು.
2023ರ ಮೇನಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ವಿನಯ್ ಕುಲಕರ್ಣಿ ಅವರಿಗೆ 2025ರ ಜೂನ್ನಲ್ಲಿ ಸುಪ್ರೀಂ ಕೋರ್ಟ್ ಮತ್ತೆ ಜಾಮೀನು ರದ್ದುಪಡಿಸಿತ್ತು. 2026ರ ಏಪ್ರಿಲ್ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮೇ ತಿಂಗಳಲ್ಲಿ ವಿಧಾನಸಭಾಧ್ಯಕ್ಷರು ಅವರ ಶಾಸಕ ಸ್ಥಾನವನ್ನು ವಜಾಗೊಳಿಸಿದ್ದರು.
ಜುಲೈ 30 ಮತ್ತು 31ರಂದು ಹೈಕೋರ್ಟ್ ಶಿಕ್ಷೆಗೆ ತಡೆಯಾಜ್ಞೆ ನೀಡಿದ ಬಳಿಕ ಅವರು ಜಾಮೀನಿನ ಮೇಲೆ ಹೊರಬಂದಿದ್ದರು. ಈ ಆದೇಶವನ್ನು ಪ್ರಶ್ನಿಸಿ ಅಕ್ಟೋಬರ್ನಲ್ಲಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಇದೀಗ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿರುವುದರಿಂದ ವಿನಯ್ ಕುಲಕರ್ಣಿ ಮೂರನೇ ಬಾರಿಗೆ ಜೈಲು ಸೇರಬೇಕಾದ ಪರಿಸ್ಥಿತಿ ಎದುರಾಗಿದೆ.




