*ವಾಲ್ಮೀಕಿ ನಿಗಮ ಹಗರಣದಲ್ಲಿ ದಿಢೀರ್ ಬದಲಾದ ನಾಗೇಂದ್ರ ಪಾತ್ರ*: *ಸಿಐಡಿ ಚಾರ್ಜ್ಶೀಟ್ನಲ್ಲಿ ಏನಿದೆ?*

ಪ್ರಗತಿವಾಹಿನಿ ಸುದ್ದಿ: ಬಹುಕೋಟಿ ವಾಲ್ಮೀಕಿ ನಿಗಮ ಹಗರಣದ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಐಡಿ ಅಂತಿಮ ವರದಿ ಸಲ್ಲಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ನಾಗೇಂದ್ರ ಅವರನ್ನು ಆರೋಪಿಯನ್ನಾಗಿ ಮಾಡದೆ ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 25ರಂದು ಸಿಐಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದರಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಹಗರಣದ ಆರೋಪ ಹೊತ್ತಿದ್ದ ನಿಗಮದ ಅಂದಿನ ಅಧ್ಯಕ್ಷ ಬಸವರಾಜ ದದ್ದಲ್ ಅವರನ್ನೂ ಪ್ರಮುಖ ಸಾಕ್ಷಿಯನ್ನಾಗಿ ಪರಿಗಣಿಸಲಾಗಿದೆ.
ನಿಗಮದ ಅಂದಿನ ವ್ಯವಸ್ಥಾಪಕ ನಿರ್ದೇಶಕ ಪರುಶರಾಮ್, ನೆಕ್ಕುಂಟಿ ನಾಗರಾಜ್ ಮತ್ತು ಸತ್ಯನಾರಾಯಣ ವರ್ಮ ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ನಿಗಮದ ಹಣವನ್ನು ನಾಗೇಂದ್ರ ಅವರು ವೈಯಕ್ತಿಕವಾಗಿ ದುರುಪಯೋಗಪಡಿಸಿಕೊಂಡಿಲ್ಲ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಸಿಐಡಿ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.
ಪ್ರಮುಖ ಆರೋಪಿ ನೆಕ್ಕುಂಟಿ ನಾಗರಾಜ್, ನಿಗಮದ ಎಂಡಿ ಪರುಶರಾಮ್ ಜೊತೆ ಸೇರಿ ರಹಸ್ಯ ಒಪ್ಪಂದ ಮಾಡಿಕೊಂಡಿದ್ದ. ನಿಗಮದ ಹಣವನ್ನು ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ನೀಡುವುದಾಗಿ ಆಮಿಷವೊಡ್ಡಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದ. ಆದರೆ, ಎಂಡಿ ಮತ್ತು ಆರೋಪಿಗಳ ನಡುವಿನ ಅಕ್ರಮ ವ್ಯವಹಾರ ಹಾಗೂ ಹಣ ವರ್ಗಾವಣೆಯ ವಿಚಾರ ಅಂದಿನ ಸಚಿವರಾಗಿದ್ದ ನಾಗೇಂದ್ರ ಅವರ ಗಮನಕ್ಕೆ ಬಂದಿರಲಿಲ್ಲ ಎಂದು ಸಿಐಡಿ ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.
ಈ ಪ್ರಕರಣದ ಹಿನ್ನೆಲೆ ನೋಡಿದರೆ, ನಿಗಮದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ನಲ್ಲಿ ಮೂವರ ಹೆಸರುಗಳು ಹಾಗೂ ಬಹುಕೋಟಿ ಹಗರಣದ ಬಗ್ಗೆ ಉಲ್ಲೇಖಿಸಿದ್ದರು. ಇದರಿಂದ ಪ್ರಕರಣ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಇದರ ಬೆನ್ನಲ್ಲೇ ನಿಗಮದ ಬ್ಯಾಂಕ್ ಖಾತೆಯಿಂದ 94 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹಣ ವರ್ಗಾವಣೆಯ ಬಗ್ಗೆ ಯಾವುದೇ ಇ-ಮೇಲ್ ಅಥವಾ ಸಂದೇಶ ಬಂದಿರಲಿಲ್ಲ. ಬ್ಯಾಂಕ್ ಸಿಬ್ಬಂದಿಯೇ ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚನೆ ಮಾಡಿದ್ದಾರೆ ಎಂದು ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ದೂರು ನೀಡಿದ್ದರು.
ಈ ದೂರಿನ ಆಧಾರದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ನ ಆರು ಮಂದಿ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಇನ್ನು ಈ ಹಗರಣದ ಕುರಿತು ಜಾರಿ ನಿರ್ದೇಶನಾಲಯವೂ ತನಿಖೆ ನಡೆಸುತ್ತಿದೆ. ನಿಗಮದ ಅಧ್ಯಕ್ಷರಾಗಿದ್ದ ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ನಾಗೇಂದ್ರ ಅವರು ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.
ಇದೀಗ ಸಿಐಡಿ ಅಂತಿಮ ದೋಷಾರೋಪ ಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆದರೆ, ಹಗರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳ ವಿರುದ್ಧದ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.


