*ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಗೆ ಶುರುವಾಯ್ತು ಕಾನೂನು ಸಂಕಷ್ಟ*: *ನ್ಯಾಯಾಲಯದಿಂದ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರಿಗೆ ಸಂಕಷ್ಟ ಎದುರಾಗಿದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ.
2027ರ ಜನವರಿ 19ರೊಳಗೆ ಉತ್ತರ ಸಲ್ಲಿಸುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಬೀದರ್ ಜಿಲ್ಲಾಡಳಿತವು ನ್ಯಾಯಾಲಯಕ್ಕೆ ಸಲ್ಲಿಸಿರುವ ತನಿಖಾ ವರದಿಯ ಆಧಾರದ ಮೇಲೆ ಈ ಮಹತ್ವದ ಬೆಳವಣಿಗೆ ನಡೆದಿದೆ.
ಸರ್ಕಾರಿ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಭು ಚವ್ಹಾಣ್ ಗೆ ನೋಟಿಸ್ ಜಾರಿ ಮಾಡಲಾಗಿದೆ.
ಕಮಲನಗರ ತಾಲೂಕಿನ ಚಾಂದೋರಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ಅವರು 2024ರಲ್ಲಿ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಬೀದರ್ ತಾಲ್ಲೂಕಿನ ಕಪಲಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಳಾರ (ಬಿ) ಗ್ರಾಮದ ಸರ್ವೆ ನಂಬರ್ 102ರಲ್ಲಿರುವ 3 ಎಕರೆ 19 ಗುಂಟೆ ಸರ್ಕಾರಿ ಗೋಮಾಳ (ಹುಲ್ಲುಗಾವಲು) ಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಪ್ರಭು ಚವ್ಹಾಣ್ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿಂದೆ ವರದಿ ಸಲ್ಲಿಸಲು ವಿಳಂಬ ಮಾಡಿದ್ದಕ್ಕಾಗಿ 2025ರ ಮಾರ್ಚ್ನಲ್ಲಿ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗಳ ವಿರುದ್ಧ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ 2026ರ ನವೆಂಬರ್ 19ರಂದು ಜಿಲ್ಲಾಡಳಿತವು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದು, “ವಿವಾದಿತ ಜಮೀನು ಸರ್ಕಾರಕ್ಕೆ ಸೇರಿದ್ದಾಗಿದೆ, ಆದರೆ ಆ ಜಮೀನಿಗೆ ಸಂಬಂಧಿಸಿದಂತೆ ಪ್ರಭು ಚವ್ಹಾಣ್ ಅವರ ಹೆಸರಿನಲ್ಲಿ ಕ್ರಯಪತ್ರ ಮಾಡಿಕೊಳ್ಳಲಾಗಿದೆ” ಎಂದು ಸ್ಪಷ್ಟಪಡಿಸಿದೆ.
2020ರಲ್ಲಿಯೇ ಅಂದಿನ ಜಿಲ್ಲಾಧಿಕಾರಿ ಎಚ್.ಆರ್. ಮಹಾದೇವ ಅವರು ಈ ಜಮೀನು ಸರ್ಕಾರದ್ದೆಂದು ಆದೇಶಿಸಿ ತನಿಖೆಗೆ ಸೂಚಿಸಿದ್ದರೂ, ಅಧಿಕಾರಿಗಳು ಭೂಮಿಯನ್ನು ಮರಳಿ ವಶಕ್ಕೆ ಪಡೆಯಲು ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಶಾಸಕರೊಂದಿಗೆ ಕೈಜೋಡಿಸಿದ ಆರೋಪದ ಮೇಲೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಮತ್ತು ಉಪನೋಂದಣಾಧಿಕಾರಿಗಳ ವಿರುದ್ಧವೂ ದೂರು ದಾಖಲಿಸಲಾಗಿದೆ.
ಅದರಂತೆ, ಜಿಲ್ಲಾಡಳಿತದ ವರದಿಯಿಂದ ವಿವಾದಿತ ಜಾಗ ಸರ್ಕಾರದ್ದೆಂದು ಸಾಬೀತಾಗಿರುವುದರಿಂದ ಶಾಸಕ ಪ್ರಭು ಚವ್ಹಾಣ್ ಅವರಿಗೆ ನೋಟಿಸ್ ಜಾರಿಯಾಗಿದೆ. ಜನವರಿ 19, 2027ರೊಳಗೆ ನ್ಯಾಯಾಲಯದ ಮುಂದೆ ತಮ್ಮ ಹೇಳಿಕೆ ನೀಡುವಂತೆ ಸೂಚಿಸಲಾಗಿದೆ.


